ಉಸ್ತುವಾರಿ ಸಚಿವರಿಗೆ ಕೊಡಗಿನ ಬಗ್ಗೆ ಕಾಳಜಿ ಇಲ್ಲ

BOJANNA SOMAIHA
Published on

ಮಡಿಕೇರಿ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜುರವರು ಕೊಡಗಿನ ಅಭಿವೃದ್ಧಿ ಮತ್ತು ಸಮಸ್ಯೆಗಳ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ.


ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯನ್ನು ಅನೇಕ ಸಮಸ್ಯೆಗಳು ಕಾಡುತ್ತಿದ್ದರು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾದರ್ಶನ ಕಾರ್ಯಕ್ರಮ ನಡೆಯಬೇಕೆನ್ನುವ ಸರ್ಕಾರದ ಆದೇಶಕ್ಕೂ ಬೆಲೆ ಇಲ್ಲದಾಗಿದೆ. ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕೂಡ ನಡೆಸುತ್ತಿಲ್ಲ ಎಂದು ಟೀಕಿಸಿದ್ದಾರೆ.


ಜಿಲ್ಲೆಯ ತಾಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿದೆ. ಆದರೆ ಕೃಷಿಕ ವರ್ಗಕ್ಕೆ ಬರ ಪರಿಹಾರ ತಲುಪಿಸುವ ಕಾಳಜಿ ತೋರುತ್ತಿಲ್ಲ. ಬೇಸಿಗೆಯಲ್ಲಿ ನೀರಿನ ಅಭಾವ ಎದುರಾದರೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಚಿಂತನೆ ನಡೆಸಿಲ್ಲ. ದಿನದಿಂದ ದಿನಕ್ಕೆ ವನ್ಯಜೀವಿಗಳ ದಾಳಿ ಮಿತಿ ಮೀರುತ್ತಿದೆ. ಕಾಡಾನೆಗಳ ದಾಳಿಯಿಂದ ಫಸಲು ನ?್ಟವಾಗುತ್ತಿದೆ. ದಕ್ಷಿಣ ಕೊಡಗಿನಲ್ಲಿ ನಿತ್ಯ ಹುಲಿ ದಾಳಿಗೆ ಹಸುಗಳು ಬಲಿಯಾಗುತ್ತಿವೆ. ಕಂದಾಯ ಇಲಾಖೆಯಲ್ಲಿ ಕಡತಗಳು ವಿಲೇವಾರಿಯಾಗುತ್ತಿಲ್ಲ. ರೈತಾಪಿ ವರ್ಗ ಕೃಷಿ ಕಾರ್ಯ ಬಿಟ್ಟು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದ್ದಾರೆ.


ಸಚಿವರು ಜಿಲ್ಲೆಯ ಬಗ್ಗೆ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರಕ್ಕೂ ಈಗಿನ ಕಾಂಗ್ರೆಸ್ ಸರ್ಕಾರಕ್ಕೂ ಯಾವುದೇ ವ್ಯತ್ಯಾಸವಿಲ್ಲವೆಂದು ಭೋಜಣ್ಣ ಸೋಮಯ್ಯ ಆರೋಪಿಸಿದ ಅವರು, ತಕ್ಷಣ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net