

ಮಂಗಳೂರು: ಸುರತ್ಕಲ್ ನ ಎಸ್‌ಇಝಡ್‌ನಲ್ಲಿರುವ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದೆ. ಭಾರಿ ಪ್ರಮಾಣದ ಹೊಗೆ ಪರಿಸರದಲ್ಲಿ ಹರಡಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಶಾರ್ಟ್ ಸರ್ಕ್ಯೂಟ್ ಅಥವಾ, ಸಿಲಿಂಡರ್ ಸ್ಪೋಟದಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ. ಈ ಸಂದರ್ಭ ಇಲ್ಲಿ ವೆಲ್ಡಿಂಗ್ ಕಾರ್ಯ ನಡೆಯುತ್ತಿತ್ತು ಎಂದು ಹೇಳಲಾಗಿದೆ.
ಏಪ್ರಿಲ್ ತಿಂಗಳಲ್ಲಿ ಇಲ್ಲಿ ಭಾರಿ ಪ್ರಮಾಣದ ಬೆಂಕಿ ಅವಘಡ ಸಂಭವಿಸಿತ್ತು. ಈ ಸಂದರ್ಭದಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿರಲಿಲ್ಲ. ಮತ್ತೆ ಬೆಂಕಿ ಅವಘಡ ಸಂಭವಿಸಿರುವುದು ಇಲ್ಲಿನ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ಆತಂಕ ಉಂಟು ಮಾಡಿದೆ.
ಸಿಬ್ಬಂದಿ ಸಂಖ್ಯೆ ಕಡಿಮೆ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಫೋಟದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.
ಸ್ಥಳದಲ್ಲಿ ಮಂಗಳೂರು ಕದ್ರಿ ಅಗ್ನಿಶಾಮಕ ದಳ, ಎಚ್‌ಪಿಸಿಎಲ್, ಎನ್ಎಂಪಿಟಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿದ್ದಾರೆ.