

ಚಿತ್ರದುರ್ಗ: ಪಕ್ಷದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ವಿಧಾನಪರಿಷತ್‌ಗೆ ನಾಮ ನಿರ್ದೇಶನಗೊಳಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ ಒತ್ತಾಯಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ಹಲವು ಹುದ್ದೆಗಳನ್ನು ನಿಭಾಯಿಸಿದ ಸಮರ್ಥ ನಾಯಕರಾಗಿದ್ದಾರೆ. ಹಿಂದುಳಿದ, ದಲಿತ, ಅಲ್ಪಸಂಖ್ಯಾತ, ಶೋಷಿತರ ಪ್ರಗತಿಗಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಅವರಿಗೆ ಅವಕಾಶ ಮಾಡಿಕೊಡಬೇಕು ಎಂದರು.
ಈ ಸಂಬಂಧ ಪ್ರತಿ ಜಿಲ್ಲಾ ಕೇಂದ್ರದಿಂದಲೂ ಕೆಪಿಸಿಸಿಗೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುವ ನಾಯಕ ರಾಹುಲ್‌ಗಾಂಧಿ, ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ, ಡಿಸಿಎಂಗೂ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ 1 ವರ್ಷ ಪೂರೈಸಿದ್ದು, ಈ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡವರ ಪರವಾಗಿ ಕೆಲಸ ಮಾಡಿದೆ. ಇದರಿಂದ ಸಾಕಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದರು.
ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜು ಮಾತನಾಡಿ, ಎಚ್.ಆಂಜನೇಯ ಅವರು ಸೋತರೂ ಮನೆಯಲ್ಲಿ ಸುಮ್ಮನೆ ಕುಳಿತಿಲ್ಲ. ಪಕ್ಷದ ಬಲವರ್ಧನೆಗಾಗಿ ಅವಿರತ ಶ್ರಮಿಸುತ್ತಿದ್ದಾರೆ. ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ವ್ಯಾಪಕ ಪ್ರಚಾರದಲ್ಲೂ ತೊಡಗಿದ್ದಾರೆ. ವರಿಷ್ಠರು ಎಂಎಲ್ಸಿ ಮಾಡುವ ಮೂಲಕ ಪರಿಷತ್ ಪ್ರವೇಶಿಸಲು ಅವಕಾಶ ಮಾಡಿಕೊಡಬೇಕು ಎಂದು ಕೋರಿದರು.
ಜಿಪಂ ಮಾಜಿ ಸದಸ್ಯ ಬಿ.ಪಿ.ಪ್ರಕಾಶ್‌ಮೂರ್ತಿ, ಶಿವಮೂರ್ತಿ ಇತರರಿದ್ದರು.