ಎಚ್ಡಿಕೆ ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಲೆಂದು ವಿಶೇಷ ಪೂಜೆ

ಎಚ್ಡಿಕೆ ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಲೆಂದು ವಿಶೇಷ ಪೂಜೆ
Published on

ಹಾಸನ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಲೆಂದು ನಗರದ ಎಂ.ಜಿ. ರಸ್ತೆಯ ಬಳಿ ಇರುವ ಗಣಪತಿ ದೇವಾಲಯದಲ್ಲಿ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.
ಬೆಳಗ್ಗೆಯಿಂದಲೇ ನೂರಾರು ಸಂಖ್ಯೆಯ ಜೆಡಿಎಸ್ ಕಾರ್ಯಕರ್ತರು ಹಾಗೂ ಎಚ್.ಡಿ.ಕೆ.ಅಭಿಮಾನಿಗಳು ಜಮಾಯಿಸಿ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿ ದೇವಾಲಯದ ಮುಂದೆ ಈಡುಗಾಯಿ ಹೊಡೆದು ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ ಮಾತನಾಡಿ, ಜನಪರ ನಾಯಕ, ಜನಪರ ಕಾಳಜಿ ಉಳ್ಳ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವುದು ನಮ್ಮೆಲ್ಲರಿಗೂ ಬೇಸರದ ಸಂಗತಿಯಾಗಿದೆ. ಶೀಘ್ರವಾಗಿ ಅವರ ಆರೋಗ್ಯ ಸುಧಾರಿಸಿ ಮತ್ತೆ ರಾಜ್ಯಕ್ಕೆ, ಈ ದೇಶಕ್ಕೆ ಕೊಡುಗೆ ನೀಡುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಜಿಲ್ಲಾ ಜೆಡಿಎಸ್ ವಕ್ತಾರ ಹೊಂಗೆರೆ ರಘು ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಮಾದರಿ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ರಾಜ್ಯದ ಜನರಿಗೆ ನೀಡುವ ಮೂಲಕ ಇತರರಿಗೆ ಮಾದರಿ ಆಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ, ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಜಿಪಂ ಮಾಜಿ ಉಪಾಧ್ಯಕ್ಷ ಸ್ವಾಮಿಗೌಡ, ನಗರಸಭೆ ಸದಸ್ಯ ಚಂದ್ರೇಗೌಡ , ತಾಪಂ ಮಾಜಿ ಅಧ್ಯಕ್ಷ ಕುಮಾರ್, ಮುಖಂಡರಾದ ಅಗಿಲೆ ಮೊಗಣ್ಣ, ರುದ್ರಪ್ಪ, ಸಂಗಂ, ಸಮೀರ್ ಖಾನ್, ಯೋಗೇಶ್, ಅನಿಲ್, ಕುಮ್ಮಿ, ವಿಜಿ, ರಾಮಣ್ಣ, ಬಾಲಕೃಷ್ಣ, ದಾಸೇಗೌಡ, ಧರ್ಮಣ್ಣ , ಚಂದ್ರಿಕಾ, ನಿರ್ಮಲಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net