ಎಚ್‌ಡಿಸಿಸಿ ಬ್ಯಾಂಕ್ ಅವ್ಯವಹಾರ ತನಿಖೆಯಾಗಲಿ: ದೇವರಾಜೇಗೌಡ

ಎಚ್‌ಡಿಸಿಸಿ ಬ್ಯಾಂಕ್ ಅವ್ಯವಹಾರ ತನಿಖೆಯಾಗಲಿ: ದೇವರಾಜೇಗೌಡ
Published on

ಹಾಸನ: ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ಹಣಕಾಸು ವ್ಯವಹಾರದಲ್ಲಿ ಪಾರದರ್ಶಕ ಇಲ್ಲದೇ ಆಡಳಿತ ಮಂಡಳಿಯವರು ಹಲವು ಅವ್ಯವಹಾರಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಂಬಂಧ ಸರ್ಕಾರ ತನಿಖೆ ನಡೆಸಿ ಸತ್ಯಾಂಶ ತಿಳಿದುಕೊಂಡು ಸೂಪರ್‌ಸೀಡ್ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ದೇವರಾಜೇಗೌಡ ಆಗ್ರಹಿಸಿದರು.

ಎಚ್‌ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕ ಹಣವನ್ನು ಸ್ವಂತಕ್ಕೆ ಉಪಯೋಗಿಸಿಕೊಂಡು ದುರಾಡಳಿತ ನಡೆಸುತ್ತಿದ್ದಾರೆ. ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರು ತಮ್ಮ ನೌಕರರು ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ. ಕೆಲವರು ಜಿಲ್ಲಾ ಬ್ಯಾಂಕ್‌ಅನ್ನು ತಮ್ಮ ಸ್ವಂತ ಆಸ್ತಿಯಂತೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಅಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ಮಾಡುವ ಮೂಲಕ ಜಿಲ್ಲೆಯ ಜನತೆಗೆ ನ್ಯಾಯ ಒದಗಿಸಿಕೊಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಉತ್ತಮವಾಗಿದೆ. ಇಲಾಖಾವಾರು ಹಣ ನಿಗದಿ ಮಾಡಿರುವುದು ಅಭಿವೃದ್ಧಿಗೆ ಪೂರಕವಾಗಿದೆ. ಬಜೆಟ್‌ನಲ್ಲಿ ನೀರಾವರಿ, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಹಣ ಮೀಸಲಿರಿಸಲಾಗಿದೆ. ಈ ಆಯಾಮಗಳಲ್ಲಿ ಅವಲೋಕಿಸಿದಾಗ, 14ನೇ ಬಾರಿಗೆ ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ದೂರದೃಷ್ಟಿ ಇರುವುದು ನಿಖರವಾಗಿ ಕಂಡು ಬರುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಚಂದ್ರಶೇಖರ್, ದ್ಯಾವಪ್ಪ, ಶಿವಕುಮಾರ್, ನಾಗರತ್ನಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net