ಎಚ್‌ಐವಿ ಸೋಂಕಿತರು ಕೀಳರಿಮೆ ಬಿಡಬೇಕು

20CBP3HIVMeeting
Published on

ಚಿಕ್ಕಬಳ್ಳಾಪುರ : ಸಮಾಜದ ಮುಖ್ಯ ವಾಹಿನಿಯಲ್ಲಿ ಉತ್ತಮ ಜೀವನ ನಡೆಸುವಂತಾಗಲು ಎಚ್‌ಐವಿ ಸೋಂಕಿತರಿಗೆ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಎಚ್‌ಐವಿ ಸೋಂಕಿತ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆ ಒದಗಿಸುವ ಸಂಬಂಧ ಸಭೆ ಹಾಗೂ ಜಿಲ್ಲಾ ಕ್ಷಯ ರೋಗ ವೇದಿಕೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಚ್‌ಐವಿ ಸೋಂಕಿತರು ಕೀಳರಿಮೆ ಬಿಡಬೇಕು. ಸಮಾಜದ ಮುಖ್ಯ ವಾಹಿನಿಗೆ ಬಂದು, ಧೃತಿಗೆಡದೇ ಹಕ್ಕುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು. ಸಾಮಾನ್ಯ ಜನರೊಂದಿಗೆ ಉತ್ತಮ ಜೀವನ ನಡೆಸಬೇಕು. ಪ್ರತಿಯೊಬ್ಬ ನಾಗರಿಕರಿಗೂ ಸಮಾನತೆಯ ಬದುಕು ಸಾಗಿಸುವ ಹಕ್ಕು ಇದೆ ಎಂದರು.

ಎಚ್‌ಐವಿ ಸೋಂಕಿತರಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವುದರ ಜತೆಗೆ ಆರ್ಥಿಕ ಸ್ವಾವಲಂಬನೆಗೆ ಅಗತ್ಯ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸರ್ಕಾರವು ಧನಶ್ರೀ, ಮೈತ್ರಿ, ಚೇತನ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಫಲಾನುಭವಿಗಳು ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಎಚ್‌ಐವಿ ಸೋಂಕಿತರ ಪೈಕಿ ವಸತಿ ಮತ್ತು ನಿವೇಶನ ರಹಿತರನ್ನು ಗುರುತಿಸಿ ವಸತಿ ಸೌಲಭ್ಯ ಒದಗಿಸಲು ತಾಲೂಕು ವಸತಿ ನೋಡಲ್ ಅಧಿಕಾರಿಗಳಿಗೆ ಮತ್ತು ಎಚ್‌ಐವಿ ಸೋಂಕಿತರಿಗೆ ಸಂಬಂಧಿಸಿದಂತೆ ವೈಯಕ್ತಿಕ ವಿಚಾರಗಳ ಗೌಪ್ಯತೆ ಕಾಪಾಡಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದಿರಾ ಕಬಾಡೆ ಮಾತನಾಡಿ, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ಹಾಗೂ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಎಚ್‌ಐವಿ ಸೋಂಕಿತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ಅದರಲ್ಲೂ ಸೋಂಕಿತ ಮಹಿಳೆಯರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದರು.

ಕ್ಷಯ ರೋಗಿಗಳಿಗೆ ಸೂಕ್ತ ಉಚಿತ ಚಿಕಿತ್ಸೆ, ಆಪ್ತ ಸಮಾಲೋಚನೆ ಮೂಲಕ ರೋಗ ನಿವಾರಣೆಗೆ ಒತ್ತು ನೀಡಲಾಗುತ್ತಿದೆ. ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಸೌಲಭ್ಯದ ಬಗ್ಗೆ ಹೆಚ್ಚಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಕ್ಷಯ ರೋಗವನ್ನು ನಿಯಂತ್ರಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ. ಇದರಿಂದ ತ್ವರಿತವಾಗಿ ಪೂರ್ಣ ಪ್ರಮಾಣದಲ್ಲಿ ಯಶಸ್ಸ ಕಾಣಬಹುದು ಎಂದರು.ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳಾ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಮತ್ತು ಜಿಲ್ಲಾ ಏಡ್ಸ್ ತಡೆಗಟ್ಟುವ ನಿಯಂತ್ರಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net