

ನಾಗಮಂಗಲ: ತಾಲೂಕಿನ ಬೆಳ್ಳೂರು ಹೋಬಳಿಯ ಎಲೆಕೊಪ್ಪ ಗ್ರಾಮದ ಕೆರೆ ಏರಿ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಪರಿಶೀಲಿಸಿದರು.
ಕಳೆದ ವರ್ಷ ಭಾರಿ ಮಳೆಯಿಂದ ಕೆರೆ ಏರಿ ಒಡೆದಿತ್ತು. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಕೆರೆ ಏರಿ ನಿರ್ಮಾಣ ಹಾಗೂ ಹೊಸ ತೂಬು ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಸಾರ್ವಜನಿಕರ ಮನವಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಚಲುವರಾಯಸ್ವಾಮಿ, ಅಧಿಕಾರಿಗಳಿಂದ ಕೆರೆ ಅಭಿವೃದ್ಧಿಯ ಮಾಹಿತಿ ಪಡೆದು ಗುಣಮಟ್ಟದ ಕಾಮಗಾರಿ ನಡೆಸುವ ಜತೆಗೆ ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸುವಂತೆ ಸೂಚಿಸಿದರು.
ತಾಲೂಕಿನ ಪ್ರವಾಸಿ ತಾಣ ಕೋಟೆ ಬೆಟ್ಟದ ರಸ್ತೆ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು. ಪ್ರವಾಸಿಗರು, ಭಕ್ತರು ಈ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಇತ್ತು. ಈ ಭಾಗದ ಜನರು ರಸ್ತೆ ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿ, ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ 5 ಕೋಟಿ ರೂ. ವೆಚ್ಚದಲ್ಲಿ 3 ಕಿ.ಮೀ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿರುವುದು ಸಾರ್ವಜನಿಕರಲ್ಲಿ ಸಂತಸವನ್ನುಂಟು ಮಾಡಿದೆ.
ಲೋಕೋಪಯೋಗಿ ಇಲಾಖೆ ಎಇಇ ನಂದಕುಮಾರ್, ಎಇ ಸೌಮ್ಯಾ, ಕಾವೇರಿ ನೀರಾವರಿ ನಿಗಮದ ಎಡೆಯೂರು ವಿಭಾಗದ ಇಇ ಕೃಷ್ಣಪ್ಪ, ಎಇಇ ರಾಜೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ವಿ.ದಿನೇಶ್, ನೆಲ್ಲಿಗೆರೆ ಗ್ರಾಪಂ ಅಧ್ಯಕ್ಷ ಬಸವರಾಜು, ಚುಂಚನಹಳ್ಳಿ ಗ್ರಾಪಂ ಅಧ್ಯಕ್ಷ ಅಶೋಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎನ್.ಕೆ.ವಸಂತಮಣಿ, ಪಾಲಗ್ರಹಾರ ಗ್ರಾಪಂ ಅಧ್ಯಕ್ಷೆ ರೇವಮ್ಮ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಿ.ಎನ್.ಬೆಟ್ಟೇಗೌಡ ಇದ್ದರು.