

ಹಾಸನ: ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಸ್ವಸಹಾಯ ಸಂಘದ ಮೂಲಕ ಆರ್ಥಿಕವಾಗಿ ಸಬಲರಾಗುತ್ತಿದ್ದು, ಪುರುಷನಿಗೆ ಸರಿಸಮನಾಗಿ ಎಲ್ಲ ಕ್ಷೇತ್ರದಲ್ಲಿಯೂ ಛಾಪು ಮೂಡಿಸುತ್ತಿದ್ದಾರೆ ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.
ಕುಟುಂಬ ನಿರ್ವಹಣೆ ಜತೆಗೆ ದೇಶದ ಅಭಿವೃದ್ಧಿಯಲ್ಲಿ ಕೂಡ ಮಹಿಳೆಯರ ಪಾತ್ರ ಅಪಾರ. ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರೂ ಕೈಗಾರಿಕಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದಾರೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ರವಿಕಾಂತ್ ಮಾತನಾಡಿ, 1975ರಲ್ಲಿ ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಘೋಷಣೆ ಮಾಡಿತು. ಭಾರತ 2001ರಲ್ಲಿ ಮಹಿಳಾ ಸಬಲೀಕರಣ ಎಂದು ಘೋಷಣೆ ಮಾಡಿತು. ಅಂದಿನಿಂದ ಮಹಿಳೆಯರಿಗಾಗಿ ಸಾಕಷ್ಟು ವಿನೂತನ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸಬೇಕು. ಉತ್ತಮ ನಾಯಕರನ್ನು ಆಯ್ಕೆ ಮಾಡುವ ಮೂಲಕ ಸಂವಿಧಾನಬದ್ಧ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣೇಗೌಡ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಹಿಳಾ ತಂಡಗಳ ಕೋಲಾಟ, ಡೊಳ್ಳು ಕುಣಿತ ಗಮನ ಸೆಳೆಯಿತು.
ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿಲ್ಲಾ ಯೋಜನಾ ನಿರ್ದೇಶಕ ಬಿ.ಎ.ಜಗದೀಶ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ವಿನೋದ್ ಚಂದ್ರ, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಎ.ಎಸ್.ಕೋಕಿಲಾ, ಬಿ.ಎ.ಕೃಷ್ಣೇಗೌಡ, ಕೋಮಲಾ ರಾಜಶೇಖರ್, ಪೂರ್ಣೇಶ್, ಹಿರಿಯ ಸ್ವಾತಂತ್ರೃ ಹೋರಾಟಗಾರ ಎಚ್.ಎಂ.ಶಿವಣ್ಣ ಇತರರು ಹಾಜರಿದ್ದರು.