ಎಲ್‌ಇಡಿ ದೀಪ ಅಳವಡಿಕೆಗೆ ಮುಂದಾದ ಜಿಲ್ಲಾಡಳಿತ

21cbp3
Published on

ಚಿಕ್ಕಬಳ್ಳಾಪುರ : ಜಿಲ್ಲೆಯ ನಗರ, ಪಟ್ಟಣ ಪ್ರದೇಶ ವ್ಯಾಪ್ತಿಯ ಎಲ್ಲ ಬೀದಿಗಳಲ್ಲೂ ಪೂರ್ಣ ಪ್ರಮಾಣದಲ್ಲಿ ವಿದ್ಯುದೀಪದ ಬದಲಿಗೆ ಎಲ್‌ಇಡಿ ದೀಪ ಅಳವಡಿಕೆಗೆ ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲಾಡಳಿತ ಭವನದ ಸಭಾಂಗದಲ್ಲಿ ಶನಿವಾರ ಆಯೋಜಿಸಿದ್ದ ಸ್ಥಳೀಯ ಆಡಳಿತ ಸಂಸ್ಥೆಗಳ ಅಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಲು ಜಿಲ್ಲಾಧಿಕಾರಿ ಆರ್.ಲತಾ, ನಗರಾಭಿವೃದ್ಧಿ ಯೋಜನಾ ಕೋಶಕ್ಕೆ ಸೂಚಿಸಿದರು.

ಜಿಲ್ಲೆಯ ಎಲ್ಲ ನಗರ, ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುವುದು. ಇದರಿಂದ ವಿದ್ಯುತ್ ಉಳಿತಾಯದ ಜತೆಗೆ ಸಾರ್ವಜನಿಕರಿಗೂ ತುಂಬಾ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಅನುಮೋದನೆ ಬಳಿಕ ಕೆಲಸ ಕೈಗೊಳ್ಳಲಾಗುವುದು. ಇದಕ್ಕೆ ಆಯಾ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು.

ಸ್ವಚ್ಛಾ ಸರ್ವೇಕ್ಷಣಾ ಅಭಿಯಾನಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ನೈರ್ಮಲ್ಯವನ್ನು ಕಾಪಾಡುವುದರ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈಗಾಗಲೇ ಪ್ರತಿ ವಾರ್ಡ್ ಗಳಲ್ಲಿ ಸ್ವಚ್ಛತಾ ನಾಯಕರನ್ನು ನೇಮಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಆದ್ಯತೆ ನೀಡಬೇಕು. ಇದರಲ್ಲಿ ಚಿಕ್ಕಬಳ್ಳಾಪುರ ನಗರಸಭೆ ಮುಂಚೂಣಿಯಲ್ಲಿದೆ. ಇದನ್ನು ಇತರೆ ಸ್ಥಳೀಐ ಆಡಳಿತ ಸಂಸ್ಥೆಗಳು ಮಾದರಿಯಾಗಿ ಸ್ವೀಕರಿಸಿ, ಕಾರ್ಯ ನಿರ್ವಹಿಸಬೇಕು ಎಂದರು.

ಈಗಾಗಲೇ ಪ್ರತಿ ವಾರ್ಡುಗಳಲ್ಲಿ ಮನೆ ಮನೆಯಿಂದಲೇ ಒಣ ಮತ್ತು ಹಸಿ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದೆ. ಕಸದಿಂದ ರಸ ಎನ್ನುವಂತೆ ತ್ಯಾಜ್ಯ ಸದ್ಬಳಕೆಯ ಮೂಲಕ ನೈರ್ಮಲ್ಯ ಕಾಪಾಡುವುದರ ಜತೆಗೆ ಆದಾಯವನ್ನು ಗಳಿಸಬೇಕು. ಇದನ್ನು ಅಭಿವೃದ್ಧಿ ಕೆಲಸಗಳಿಗೆ ಬಳಸಬೇಕು ಎಂದರು.ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ರೇಣುಕಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net