ಎಸ್ಸೆಸ್ಸೆಲ್ಸಿ 2 ಪರೀಕ್ಷೆಗೆ ಶೇ 100ರಷ್ಟು ಹಾಜರಾತಿ ಇರಲಿ

Makkala Ayoga
Published on

ಚಿತ್ರದುರ್ಗ: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರಲ್ಲಿ ಶೇ 100ರಷ್ಟು ಮಕ್ಕಳು ಹಾಜರಾಗಲು ಅಗತ್ಯ ಕ್ರಮವಹಿಸಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಸೂಚಿಸಿದರು.

ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಬುಧವಾರ ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ ಅನೇಕರು ಗೈರಾಗಿದ್ದಾರೆ. ಮುಖ್ಯ ಪರೀಕ್ಷೆಗೆ ಗೈರಾದರೆ ಹೇಗೆ? ಇಲ್ಲಿ ಉತ್ತೀರ್ಣರಾಗದಿದ್ದರೆ, ಮುಂದಿನ ಅವರ ಭವಿಷ್ಯದ ಗತಿ ಏನು ಎಂದು ಪ್ರಶ್ನಿಸಿದರು.

ವಿದ್ಯಾರ್ಥಿಗಳು ಶಾಲೆಯಲ್ಲಿ ಇದ್ದಷ್ಟು ಸುರಕ್ಷಿತ. ಹೊರಗುಳಿದರೆ, ಬಾಲ್ಯವಿವಾಹ, ಬಾಲಕಾರ್ಮಿಕ ಸೇರಿ ಅನೇಕ ಸಮಸ್ಯೆ ಎದುರಿಸಲಿದ್ದಾರೆ. ಹೀಗಾಗಿ ತರಗತಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಕ್ಕಳು ಗೈರು ಹಾಜರಾಗದಂತೆ ಎಚ್ಚರವಹಿಸಿ. ಈ ಕುರಿತು ಪ್ರತಿ ಶಾಲೆಯ ಮುಖ್ಯ ಶಿಕ್ಷಕರಿಗೆ ಜವಾಬ್ದಾರಿ ನಿಗದಿಪಡಿಸಿ ಎಂದು ತಾಕೀತು ಮಾಡಿದರು.

ಗೈರಾಗುವ ವಿದ್ಯಾರ್ಥಿಗಳಿಗೆ ಯಾವ ಕಾರಣಕ್ಕೂ ಹಾಜರಾತಿ ಕೊಡಬಾರದು. ಇದರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಸಮರ್ಪಕವಾಗಿ ಸಿಗುವುದಿಲ್ಲ. ಈ ಕುರಿತು ಆಗಿಂದಾಗ್ಗೆ ಬಿಇಒಗಳು ಹಾಜರಾತಿ ಪರಿಶೀಲಿಸಿ, ಸಮರ್ಥವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಯ ಸಮಸ್ಯೆ ಇದ್ದು, ಬಹುತೇಕರಿಗೆ ಮಾತನಾಡಲು ಬರುವುದಿಲ್ಲ. ಆದ್ದರಿಂದ 3ರಿಂದ 6 ತಿಂಗಳವರೆಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕೋರ್ಸ್ ಆರಂಭಿಸಿ, ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ತರಬೇತಿ ನೀಡಬೇಕು ಎಂದು ತಾಕೀತು ಮಾಡಿದರು.

ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ತುರ್ತು ಸೇವೆ 112 ಸಂಖ್ಯೆಯನ್ನು ಪ್ರಕಟಿಸಬೇಕು. ಶಾಲೆ, ವಿದ್ಯಾರ್ಥಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಮಾತನಾಡಿ, ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ತರಲು ವಿಶೇಷ ಆಂದೋಲನಾ ನಡೆಸಲಾಗುತ್ತಿದೆ. ಗೈರು ಹಾಜರಾತಿ ಸಂಬಂಧ ಶಿಕ್ಷಣ ಇಲಾಖೆ ಅಧಿಕಾರಿಗಳ ತಂಡ ರಚಿಸಿ, ಪರಿಶೀಲಿಸಿ, ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಡಿಡಿಪಿಐಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಡಿಡಿಪಿಐ ಎಂ.ಆರ್.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ದಿವಾಕರ್, ಬಿಇಒಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net