ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಸಿ : ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಸೂಚನೆ

18CBP6
Published on

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯುವಂತಾಗಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಶಿಕ್ಷಣ ಇಲಾಖೆಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಟೇಬಲ್, ಶೌಚಗೃಹ ಸೇರಿ ಅಗತ್ಯ ವ್ಯವಸ್ಥೆ ಕಲ್ಪಿಸಿರಬೇಕು. ಕರೊನೋ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳು ಮುಖಗವಸು ಹಾಕಿಕೊಂಡು ಪರೀಕ್ಷೆ ಬರೆಯಬಹುದು. ಆದರೆ, ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಮಾತನಾಡಿ, ಮಾ.27 ರಿಂದ ಏ.9 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 15,476 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು.

ಮಾ.27 ಕನ್ನಡ, ಮಾ.30 ವಿಜ್ಞಾನ, ಏ.1 ಇಂಗ್ಲಿಷ್, ಏ.3 ಹಿಂದಿ, ಏ.7 ಗಣಿತ, ಏ.9 ಸಮಾಜ ಪರೀಕ್ಷೆ ನಡೆಯಲಿದ್ದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30 ಪರೀಕ್ಷಾ ಅವಧಿಯಾಗಿದೆ. ಬಾಗೇಪಲ್ಲಿ 7, ಚಿಕ್ಕಬಳ್ಳಾಪುರ 15, ಚಿಂತಾಮಣಿ ಮತ್ತು ಗೌರಿಬಿದನೂರು ತಲಾ 14, ಗುಡಿಬಂಡೆ 4, ಶಿಡ್ಲಘಟ್ಟ 10 ಸೇರಿ ಜಿಲ್ಲಾದ್ಯಂತ 64 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. 645 ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಸ್ವೀಕರಿಸಲು ಮುಖ್ಯ ಅಧೀಕ್ಷಕರು ಮತ್ತು ಕಸ್ಟೋಡಿಯನ್, 29 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ತಾಲೂಕು ಜಾಗೃತ ದಳ ಸೇರಿ 6 ತಂಡ ಕಾರ್ಯ ನಿರ್ವಹಿಸಲಿವೆ ಎಂದರು.ಸಭೆಯಲ್ಲಿ ಡಿವೈಎಸ್‌ಪಿ ರವಿಶಂಕರ್, ಜಿಲ್ಲಾ ಖಜಾನೆಯ ಉಪನಿರ್ದೇಶಕ ಬಿ.ಎಂ.ಮುನಿರೆಡ್ಡಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net