

ಚಿಕ್ಕಬಳ್ಳಾಪುರ : ಕರೊನಾ ಮುಂಜಾಗ್ರತಾ ಕ್ರಮಗಳ ನಡುವೆ ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪೂರಕ ಗಣಿತ ಪರೀಕ್ಷೆ ಸುಗಮವಾಗಿ ನಡೆಯಿತು.
ಪರೀಕ್ಷೆಗೆ 1199 ಮಂದಿ ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 1072 ಮಂದಿ ಹಾಜರಾಗಿ, 127 ಮಂದಿ ಗೈರಾಗಿದ್ದರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ಪರೀಕ್ಷೆಗೆ ಮೊದಲು ಕೇಂದ್ರಗಳಿಗೆ ಸ್ಯಾನಿಟೈಸ್ ಮಾಡಲಾಗಿತ್ತು. ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ನಿಯಮ ಜಾರಿಯಲ್ಲಿತ್ತು. ಪ್ರತಿ ವಿದ್ಯಾರ್ಥಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಯಿತು. ಪರಸ್ಪರ ಅಂತರ ಕಾಪಾಡಿಕೊಳ್ಳುವಿಕೆ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವಿಕೆ ಸೇರಿ ಕರೊನಾ ಸೋಂಕು ತಡೆ ಮುಂಜಾಗ್ರತಾ ಕ್ರಮಗಳನ್ನು ಉಲ್ಲಂಘಿಸದಂತೆ ನೋಡಿಕೊಳ್ಳಲಾಯಿತು. ನಕಲು ಕಂಡು ಬಂದಿಲ್ಲ. ಸಾಮಾನ್ಯ ವಿದ್ಯಾರ್ಥಿಗಳು 824 ಮತ್ತು ಖಾಸಗಿ ವಿದ್ಯಾರ್ಥಿಗಳು 248 ಮಂದಿ ಪರೀಕ್ಷೆ ಬರೆದರು.
13 ಮಂದಿಗೆ ವಿಶೇಷ ವ್ಯವಸ್ಥೆ : ಅನಾರೋಗ್ಯ ಹಿನ್ನೆಲೆಯಲ್ಲಿ 13 ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಕಳೆದ ಜೂನ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಂದರ್ಭದಲ್ಲಿ ಕರೊನಾ ಸೋಂಕಿಗೆ ತುತ್ತಾಗಿದ್ದ 6 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆದರು. ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದವರ ಪೈಕಿ ಯಾವುದೇ ವಿದ್ಯಾರ್ಥಿಗೆ ಸೋಂಕು ಕಂಡು ಬಂದಿಲ್ಲ.