ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ 21ರಿಂದ

GADAG DC SUNDARESH BAABU
Published on

ಗದಗ: ಜಿಲ್ಲೆಯಲ್ಲಿ ಸೆ.21ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಸುರಕ್ಷಿತ ಹಾಗೂ ಯಶಸ್ವಿಯಾಗಿ ಜರುಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲ ಪರೀಕ್ಷೆ ಕೇಂದ್ರಗಳಲ್ಲಿ ಶುಚಿತ್ವ ಕಾಪಾಡುವುದರ ಜತೆಗೆ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸುಂದರೇಶಬಾಬು ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೆ. 21 ರಿಂದ ಸೆ. 28ರವರೆಗೆ ನಡೆಯುವ ಪರೀಕ್ಷೆಯಲ್ಲಿ ಲೋಪದೋಷಗಳು ಕಂಡು ಬರದಂತೆ ನಿಗಾವಹಿಸಬೇಕು. ಕರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಕೇಂದ್ರಗಳಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್​ಗೆ ಒಳಪಡಿಸಬೇಕು ಎಂದರು.

ಪರೀಕ್ಷೆ ಕೇಂದ್ರದ ಆವರಣ ಮತ್ತು ಕೊಠಡಿಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸರ್ ಸಿಂಪಡಿಸಬೇಕು. ವಿದ್ಯಾರ್ಥಿಗಳು ಮಾಸ್ಕ್ ಧರಿಸಬೇಕು ಹಾಗೂ ಪರಸ್ಪರ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಕೇಂದ್ರಗಳ ಸುತ್ತಲೂ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಪ್ರತಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಕಾಲಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ಸಾರಿಗೆ ಸಂಪರ್ಕದಲ್ಲಿ ಅಸ್ತವ್ಯಸ್ತವಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ವಿಷಯ ಶಿಕ್ಷಕರು ಪರೀಕ್ಷೆ ಕೇಂದ್ರದೊಳಗೆ ಬರದಂತೆ ನಿಗಾ ಇಡಬೇಕು. ಕೊಠಡಿ ಮೇಲ್ವಿಚಾರಕರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಪರೀಕ್ಷೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವಲಿಂಗಪ್ಪ ಜಿ.ಎಂ. ಮಾತನಾಡಿ, ಜಿಲ್ಲೆಯಲ್ಲಿ ಪರೀಕ್ಷೆಗೆ 280 ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು 5493 ವಿದ್ಯಾರ್ಥಿಗಳ ಹೆಸರು ನೋಂದಣಿಯಾಗಿದ್ದು, 23 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಪ್ರತಿ ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮೀರದಂತೆ ಆಸನ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪೂರಕ ಪರೀಕ್ಷೆಗಳನ್ನು ಯಶಸ್ವಿಗೊಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷೆ ಕೇಂದ್ರಗಳ ಮುಖ್ಯಸ್ಥರು, ಕೊಠಡಿ ಮೇಲ್ವಿಚಾರಕರು, ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪರೀಕ್ಷೆಗೆ ಹಾಜರಾಗುವ ಕೋವಿಡ್ ಸೋಂಕಿತ ಹಾಗೂ ಶಂಕಿತ ಮಕ್ಕಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಜಿಲ್ಲೆಯ ಪ್ರತಿ ಪರೀಕ್ಷೆ ಕೇಂದ್ರಗಳಲ್ಲಿ ಅರೇ ವೈದ್ಯಕೀಯ ಸಿಬ್ಬಂದಿ ನಿಯೋಜನೆ, ತುರ್ತು ಸೇವೆಗಾಗಿ ಆಂಬುಲೆನ್ಸ್ ಲಭ್ಯವಿರುವಂತೆ ನೋಡಿಕೊಳ್ಳಬೇಕು.| ಸುಂದರೇಶಬಾಬು, ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net