ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಯತ್ತ ಗಮನಹರಿಸಿ

IMG_20241128_123713
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಸಂಬಂಧ ಹನೂರಿನಲ್ಲಿ ಆಯೋಜಿಸಿದ್ದ ಮುಖ್ಯಶಿಕ್ಷಕರ ಸಭೆಯಲ್ಲಿ ಬಿಇಒ ಗುರುಲಿಂಗಯ್ಯ ಮಾತನಾಡಿದರು. ಮಲ್ಲಿಕಾರ್ಜುನ, ಅಶೋಕ್ ಇತರರು ಇದ್ದರು.
Published on

ಹನೂರು: ಕ್ರಿಯಾ ಯೋಜನೆಯಲ್ಲಿ ರೂಪಿಸಿರುವ ಕಾರ್ಯಚಟುವಟಿಕೆಯನ್ನು ಶಾಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಮೂಲಕ ಪ್ರತಿಯೊಬ್ಬರೂ ಎಸ್ಸೆಸ್ಸೆಲ್ಸಿ ಫಲಿತಾಂಶದ ಸುಧಾರಣೆಯತ್ತ ಗಮನ ಹರಿಸಬೇಕು ಎಂದು ಬಿಇಒ ಗುರುಲಿಂಗಯ್ಯ ತಿಳಿಸಿದರು.

ಪಟ್ಟಣದ ಸರ್ಕಾರಿ ಜಿ.ವಿ.ಗೌಡ ಪ್ರೌಢಶಾಲೆಯಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಸಂಬಂಧ ಆಯೋಜಿಸಿದ್ದ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.

ಹನೂರು ಶೈಕ್ಷಣಿಕ ವಲಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಳೆದ ಐದಾರು ವರ್ಷಗಳಿಂದ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಆದರೆ ಕಳೆದ ಸಾಲಿನಲ್ಲಿ ಕೊನೆಯ ಸ್ಥಾನ ತಲುಪಿರುವುದು ನಿಜಕ್ಕೂ ವಿಪರ್ಯಾಸ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದ್ದು, ಫಲಿತಾಂಶ ಸುಧಾರಣೆಯತ್ತ ಗಮನ ಹರಿಸಬೇಕಿದೆ. ಈಗಾಗಲೇ ಈ ಸಂಬಂಧ ಕ್ರಿಯಾಯೋಜನೆಯನ್ನು ತಯಾರಿಸಲಾಗಿದ್ದು, ಆಯಾ ತಿಂಗಳು ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಯನ್ನು ಶಾಲೆಯಲ್ಲಿ ಅನುಷ್ಠಾನಗೊಳಿಸುವಂತೆ ಸೂಚಿಸಲಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಅದರಂತೆಯೇ ಕಾರ್ಯನಿರ್ವಹಿಸಬೇಕು. ಜತೆಗೆ ಈಗಾಗಲೇ ಕೈಗೊಂಡಿರುವ ಚಟುವಟಿಕೆ ಎಷ್ಟರ ಮಟ್ಟಿಗೆ ಫಲಪ್ರದವಾಗಿದೆ ಎಂಬುದನ್ನು ಮೌಲ್ಯಮಾಪನ ಮಾಡಬೇಕು. ಒಂದು ವೇಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದಿದ್ದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್ ಅಧಿಕಾರಿ ಮಲ್ಲಿಕಾರ್ಜುನ ಅವರು ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆ ಕುರಿತು ವಿವರವಾಗಿ ತಿಳಿಸಿಕೊಟ್ಟರು. ಶಿಕ್ಷಣ ಸಂಯೋಜಕ ಅಶೋಕ್ ಹಾಗೂ ವಿವಿಧ ಪ್ರೌಢಶಾಲೆಯ ಮುಖ್ಯಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net