ಎಸ್‌ಟಿ ವರ್ಗಕ್ಕೆ ಶೇ.7.5 ಮೀಸಲಾತಿ ನೀಡಿ

12Manju4
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ರಾಜಶೇಖರ ತಳವಾರ ಮಾತನಾಡಿದರು. ದಿನೇಶ ಬಾಗಡೆ, ಪಾಂಡುರಂಗ ನಾಯಕ, ಸಂಜಯ ನಾಯಕ ಇದ್ದರು.
Published on

ಬೆಳಗಾವಿ: ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ಕಲ್ಪಿಸಬೇಕು. ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಉಪಾಧ್ಯಕ್ಷ ರಾಜಶೇಖರ ತಳವಾರ ಆಗ್ರಹಿಸಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿ ಜಾರಿಗಾಗಿ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರೃ ಉದ್ಯಾನದಲ್ಲಿ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದಾರೆ.

ಸರ್ಕಾರವು ಈ ಹೋರಾಟವನ್ನು ಹಗುರವಾಗಿ ಪರಿಗಣಿಸಬಾರದು. ಕೂಡಲೇ ಎಚ್ಚೆತ್ತು ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಪರಿಶಿಷ್ಟ ಪಂಗದಡ ಜನಸಂಖ್ಯೆ 70 ಲಕ್ಷಕ್ಕೂ ಅಧಿಕವಿದೆ. ಆದರೆ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ನಮ್ಮ ಸಮುದಾಯ ಹಿಂದುಳಿದಿದೆ. ಸಮುದಾಯಕ್ಕೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ.7.5 ಮೀಸಲಾತಿ ನೀಡಲು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ನ್ಯಾಯಮೂರ್ತಿ ನಾಗಮೋಹನ ದಾಸ್ ಏಕಸದಸ್ಯ ಪೀಠ ರಚಿಸಿ, ಸರ್ಕಾರಕ್ಕೆ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಆದರೆ, ಕೆಲ ತಿಂಗಳಲ್ಲೇ ಸರ್ಕಾರ ಪತನವಾಗಿದ್ದರಿಂದ ಬೇಡಿಕೆ ಈಡೇರಿಲ್ಲ ಎಂದು ದೂರಿದರು. ಜಿಲ್ಲಾ ವಾಲ್ಮೀಕಿ ಸಮಾಜದ ಪ್ರಧಾನ ಕಾರ್ಯದರ್ಶಿ ದಿನೇಶ ಬಾಗಡೆ, ಪಾಂಡುರಂಗ ನಾಯಕ, ಸಂಜಯ ನಾಯಕ, ಅಶೋಕ ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net