

ಮಡಿಕೇರಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಿದೆ ಎಂದು ಆರೋಪಿಸಿ ನಗರದಲ್ಲಿ ಎಸ್‌ಡಿಪಿಐ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರಸಭಾ ಸದಸ್ಯ ಅಮೀನ್ ಮೊಹ್ಸಿನ್ ಮಾತನಾಡಿ, ಯಾವುದೇ ಆಧಾರವಿಲ್ಲದೆ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಕೈಗೊಂಡ ತನಿಖೆಯಿಂದ ಯಾವುದೇ ಬಲವಾದ ಸಾಕ್ಷೃಗಳು ಸಿಕ್ಕಿಲ್ಲ. ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು ನಾಯಕರ ಬಂಧನ ಮಾಡಲಾಗಿದೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಕಲೀಲ್, ಕಾರ್ಯದರ್ಶಿ ಶಫಿ, ನಗರ ಅಧ್ಯಕ್ಷ ರಿಜ್ವಾನ್, ಉಪಾಧ್ಯಕ್ಷ ಮೈಕಲ್ ವೇಗಸ್, ನಗರಸಭಾ ಸದಸ್ಯ ಮನ್ಸೂರ್ ಅಲಿ, ಬಷೀರ್, ಮೇ ರಿವೇಗಸ್ ಇದ್ದರು.