ಏ.30 ರಂದು ಶ್ರೀಬಸವೇಶ್ವರ ಜಯಂತ್ಯುತ್ಸವ

Nandesh Mudlupura
Published on

ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏ.30 ರಂದು ಶ್ರೀಬಸವೇಶ್ವರ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮನವಿ ಮಾಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀಬಸವೇಶ್ವರರ ಪ್ರತಿಮೆಗೆ ಬೆಳಗ್ಗೆ 9 ಗಂಟೆಗೆ ಮಾಲಾರ್ಪಣೆ ಮಾಡಲಾಗುತ್ತದೆ. ಬಳಿಕ ಅಲ್ಲಿಂದ ಮೆರವಣಿಗೆ ಹೊರಟು ಬಿ.ರಾಚಯ್ಯ ಜೋಡಿರಸ್ತೆ, ಶ್ರೀಭವನೇಶ್ವರಿ ವೃತ್ತ, ಡಿವಿಯೇಷನ್ ರಸ್ತೆ, ಸುಲ್ತಾನ್ ಷರ್ೀ ವೃತ್ತ, ಗುಂಡ್ಲುಪೇಟೆ ವೃತ್ತ, ದೊಡ್ಡಂಗಡಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ ಮೂಲಕ ಸಾಗಿ ವೇದಿಕೆ ಕಾರ್ಯಕ್ರಮ ನಡೆಯಲಿರುವ ಪೇಟೆ ಪ್ರೈಮರಿಶಾಲಾ ಅವರಣದಲ್ಲಿ ಮೆರವಣಿಗೆ ಅಂತ್ಯವಾಗಲಿದೆ. ಶ್ರೀಸಿದ್ದಮಲ್ಲೇಶ್ವರ ವಿರಕ್ತ ಮಠ ಹಾಗೂ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಪ್ರಸಾದ ವಿನಿಯೋಗ ಆಯೋಜಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುವ ವೇದಿಕೆ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಬಸವಾಭಿಮಾನಿಗಳು, ಲಿಂಗಾಯತ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ರಾಜಕೀಯ ಧುರೀಣರು, ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಬಸವೇಶ್ವರರ 892ನೇ ಜಯಂತಿ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಗೋಷ್ಠಿಯಲ್ಲಿ ಮಹಾಸಭಾ ಕೇಂದ್ರ ಸಮಿತಿ ಸದಸ್ಯ ಎನ್‌ರಿಚ್ ಮಹದೇವಸ್ವಾಮಿ, ಜಿಲ್ಲಾ ಕೋಶಾಧ್ಯಕ್ಷ ಗುರುಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಂಜೇಶ್ ಮೂಡ್ಲುಪುರ, ಪದಾಧಿಕಾರಿಗಳಾದ ಬಾಲಚಂದ್ರ, ರಾಜೇಂದ್ರ ಪ್ರಸಾದ್, ಉಮೇಶ್ ಹಾಜರಿದ್ದರು.

10 ಸಾವಿರ ಜನರ ನಿರೀಕ್ಷೆ:

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಒಟ್ಟಾಗಿ ಬಸವ ಜಯಂತಿ ಆಚರಿಸುವಂತೆ ಮನವಿ ಮಾಡಿರುವುದರಿಂದ ಜಿಲ್ಲಾಧ್ಯಂತ ಸುಮಾರು 10 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮೆರವಣಿಗೆಯಲ್ಲಿ ನಂದಿಧ್ವಜ, ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ ಹಾಗೂ ಇನ್ನಿತರೆ ಜಾನಪದ ಕಲಾತಂಡಗಳು ಭಾಗವಹಿಸಲಿದೆ. ಈಗಾಗಲೇ ಬಸವ ಜಯಂತಿಯಂದು ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಅದರಂತೆ ಜಯಂತಿಯಂದು ಮದ್ಯ ಮಾರಾಟವನ್ನು ನಿಷೇಧ ಮಾಡಬೇಕು ಎಂದು ಮೂಡ್ಲುಪುರ ನಂದೀಶ್ ಅವರು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net