

ಚಾಮರಾಜನಗರ: ರಾಜ್ಯ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಏ.4 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎ.ಎಂ.ಮಹೇಶ್‌ಪ್ರಭು ತಿಳಿಸಿದರು.
ರಾಜ್ಯ ಸರ್ಕಾರ ರೈತರ ಪರವಾಗಿ ಕೆಲಸ ಮಾಡಬೇಕು. ಆದರೆ ಸ್ಮಾರ್ಟ್ ಮೀಟರ್ ಅಳವಡಿಸುವ ಮೂಲಕ ವ್ಯಾಪಾರ ಮಾಡಲು ಹೊರಟಿದೆ. ಕೂಡಲೇ ಈ ನಿರ್ಧಾರವನ್ನು ಕೈಬಿಟ್ಟು ರೈತ ಮತ್ತು ಜನಪರವಾದ ಚಿಂತನೆಯನ್ನು ನಡೆಸಬೇಕು. ಸ್ಮಾರ್ಟ್ ಮೀಟರ್ ಅಳವಡಿಸುವುದರಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಮೈಸೂರು-ಚಾಮರಾಜನಗರ ಭಾಗಕ್ಕೆ ಎರಡನೇ ಹಂತದ ಕಬಿನಿ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನ ಮಾಡಬೇಕು. ರೈತರ ಕೃಷಿ ಪಂಪ್‌ಸೆಟ್‌ಗಳ ಅಕ್ರಮ-ಸಕ್ರಮ ಯೋಜನೆಯನ್ನು ಮುಂದುವರಿಸಬೇಕು. ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಬೇಕು. ಕಾಳನಹುಂಡಿ ಬಳಿ ಇರುವ ತೆಂಗು ಸಂಸ್ಕರಣಾ ಘಟಕದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ, ಹೊರ ರಾಜ್ಯಗಳಲ್ಲಿ 1800 ರೂ, ಅಳವಡಿಕೆ ಮಾಡುತ್ತಿರುವ ಮೀಟರ್‌ಗೆ ನಮ್ಮ ರಾಜ್ಯದಲ್ಲಿ ಹೆಚ್ಚು ಹಣವನ್ನು ಪಡೆಯಲಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಸಿ ರೈತರ ಹಣಪೋಲು ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಗೋಷ್ಠಿಯಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಯಶ್ವಂತ್, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ತಾಲೂಕು ಉಪಾಧ್ಯಕ್ಷ ಜಯರಾಜು, ಬಸವಣ್ಣ ಹಾಜರಿದ್ದರು.