ಏನಾಗಬೇಕು ಎನ್ನುವುದನ್ನು ಸಕಾರಾತ್ಮಕವಾಗಿ ಚಿಂತಿಸಬೇಕು: ಕೃಷಿಕ್ ಸರ್ವೋದಯ ಫೌಂಡೇಶನ್ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಅಭಿಮತ

61
Published on

ಮೈಸೂರು: ದೃಷ್ಟಿಯಂತೆ ಸೃಷ್ಟಿ ಎಂಬಂತೆ ನಿಮ್ಮ ಚಿಂತನೆಯಂತೆ ನೀವು ಆಗುತ್ತೀರಿ. ಹಾಗಾಗಿ ಸಕಾರಾತ್ಮಕವಾಗಿ ತಾನು ಏನಾಗಬೇಕು ಎನ್ನುವುದನ್ನು ಮೊದಲು ಚಿಂತಿಸಬೇಕು ಎಂದು ಕೃಷಿಕ್ ಸರ್ವೋದಯ ಫೌಂಡೇಶನ್ ಅಧ್ಯಕ್ಷರಾದ ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಎಂ.ಕೆ.ಶಂಕರಲಿಂಗೇಗೌಡ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ 2023-24ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಪ್ರವೇಶ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜ್ಞಾನಕ್ಕಿಂತ ಮಿಗಿಲಾದುದ್ದು ಈ ಪ್ರಪಂಚದಲ್ಲಿ ಯಾವುದೂ ಇಲ್ಲ. ಜ್ಞಾನವೇ ಈ ಜಗತ್ತಿನ ಬಹುದೊಡ್ಡ ಶಕ್ತಿಯಾಗಿದೆ. ಜ್ಞಾನ ಸಾಧನೆಗೆ ಅಂದಿಗಿಂತ ಇಂದು ಹೆಚ್ಚಿನ ಸೌಕರ್ಯ ಸವಲತ್ತುಗಳು ಲಭ್ಯವಿದ್ದು ಅವುಗಳನ್ನು ಬಳಸಿಕೊಳ್ಳುವುದರ ಮುಖೇನ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿ ಕೊಳ್ಳಬೇಕು ಎಂದು ತಮ್ಮ ವಿದ್ಯಾರ್ಥಿ ಜೀವನವನ್ನು ಹಂಚಿಕೊಂಡರು.
ವಿದ್ಯಾರ್ಥಿ ಜೀವನದಲ್ಲಿ ಕಾಲಹರಣ ಮಾಡದೇ ಸಮಯದ ಅರಿವು ಮತ್ತು ಸಮಯದ ಬೆಲೆ ಕಂಡುಕೊಳ್ಳಬೇಕು. ಕಾಲ ಹೊಂದಾಣಿಕೆ ಮಾಡಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳು ತರಗತಿಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ತಲೆಯಲ್ಲಿನ ಚಿಂತನೆಗಳು ಪದಗಳ ಮುಖೇಣ ಬಾಯಿಂದ ಹೊರಡುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಗ್ರಹಿಕೆಯ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕಾದರೇ ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗುತ್ತದೆ. ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ಇಂದು ಅನಗತ್ಯವಾಗಿ ವಿದ್ಯಾರ್ಥಿ ಸಮುದಾಯ ಬಳಸುತ್ತಿದ್ದು ಅದರಿಂದ ಹೊರಬರಬೇಕಾಗಿದೆ. ನಿಮ್ಮ ಭವಿಷ್ಯ ನಿಮ್ಮ ಕೈಯ್ಯಲ್ಲೇ ಇದೆ ಎಂಬುದನ್ನು ಮೊದಲು ಅರಿಯಬೇಕು ಎಂದರು.
ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಪಿ.ವಿಶ್ವನಾಥ್ ಮಾತನಾಡಿ, ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ತಿಳಿಸುತ್ತಾ ಅದರ ಸದುಪಯೋಗವನ್ನ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಗುಂಡಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ಕೋಶಾಧ್ಯಕ್ಷ ಶ್ರೀಶೈಲರಾಮಣ್ಣವರ್, ಕಾಲೇಜು ನಿರ್ವಹಣಾ ಮಂಡಳಿ ಅಧ್ಯಕ್ಷ ಟಿ.ನಾಗರಾಜು, ಪ್ರಾಂಶುಪಾಲ ಡಾ.ಎಸ್.ಮರೀಗೌಡ , ಕಾರ್ಯಕ್ರಮ ಸಂಯೋಜಕ ಡಾ.ಬಿ.ಟಿ.ರಘು ಇತರರು ಇದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿದ ನಂತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗಲು ಕೃಷಿಕ್ ಸರ್ವೋದಯ ಫೌಂಡೇಶನ್ ಸಂಸ್ಥೆಯ ಜೊತೆ ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net