

ಸೇಡಂ: ತಾಲೂಕು ಕೇಂದ್ರ ಅಲೆದು ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಜನರಿಗೆ ಕಷ್ಟವಾಗುತ್ತಿರುವುದನ್ನು ಅರಿತು ಪ್ರತಿ ವಾರಕ್ಕೊಮ್ಮೆ ಗ್ರಾಮೀಣ ಭಾಗದ ಗ್ರಾಮವೊಂದರಲ್ಲಿ ಜನಸ್ಪಂದನ ಸಭೆ ನಡೆಸುತ್ತಿದ್ದು, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ ಆದ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಹೇಳಿದರು.
ಮುಧೋಳದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ತಾಲೂಕು ಆಡಳಿತದಿಂದ ಸೋಮವಾರ ಆಯೋಜಿಸಿದ್ದ ಶಾಸಕರ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಒಂದೇ ಸೂರಿನಡಿಯಲ್ಲಿ ಎಲ್ಲ ಯೋಜನೆಗಳು ಸಿಗುವಂತೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.