

ಬೆಳಗಾವಿ: ಒಳ ಮೀಸಲಾತಿ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಿಲ್ಲಾ ಮಾದಿಗರ ಮಹಾಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಒಳ ಮೀಸಲಾತಿಗಾಗಿ ಮಾದಿಗ ಸಮಿತಿ ದಶಕಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಸ್ಪಂದಿಸುತ್ತಿಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಒಂದು ವರ್ಷ ಕಳೆಯಿತು. ಆದರೆ, ಇಲ್ಲಿಯವರೆಗೆ ಒಳಮೀಸಲಾತಿ ಸೌಲಭ್ಯ ಸಿಕ್ಕಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶ ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿರುವುದು ಪರಿಶಿಷ್ಟ ಜಾತಿಗಳ ಸಮುದಾಯಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ತಣ ಒಳಮೀಸಲಾತಿ ಅನುಷ್ಠಾನಗೊಳಿಸುವ ಮೂಲಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಶಾಸಕ ದುಯೋರ್ಧನ ಐಹೊಳೆ ಮಾತನಾಡಿ, ಸುಪ್ರೀಂ ಕೋರ್ಟ್ ಆದೇಶದಂತೆ ಈಗಾಗಲೇ ತೆಲಂಗಾಣ, ಆಂಧ್ರ ಪ್ರದೇಶ, ಪಂಜಾಬ ಸೇರಿ ವಿವಿಧ ರಾಜ್ಯಗಳಲ್ಲಿ ಒಳ ಮೀಸಲಾತಿ ಜಾರಿಯಾಗಿದ್ದು, ಕರ್ನಾಟಕದಲ್ಲಿಲ್ಲ. ಈ ಬಗ್ಗೆ ಸರ್ಕಾರ ಅನಗತ್ಯವಾಗಿ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರದ ವಿಳಂಬ ಧೋರಣೆಯಿಂದಾಗಿ ಸಮುದಾಯದ ಜನ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಅ.15ರ ಒಳಗಾಗಿ ಸರ್ಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸಬೇಕು. ಇಲ್ಲವಾದಲ್ಲಿ, ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ರಾಜೇಂದ್ರ ಐಹೊಳೆ, ಅನಂತಕುಮಾರ ಬ್ಯಾಕುಡ, ಚಂದ್ರಕಾಂತ ಕಾದ್ರೊಳ್ಳಿ, ಅರುಣ ಐಹೊಳೆ, ಪ್ರಶಾಂತ ಐಹೊಳೆ, ಸಿದ್ದು ಮೇಂತ್ರಿ, ರಮೇಶ ಮಾದರ, ಬಸವರಾಜ ದೊಡ್ಡಮನಿ, ಉದಯ ರೆಡ್ಡಿ ಇತರರಿದ್ದರು.