

ಹಾಸನ: ಸುಪ್ರೀಂಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಗುರುವಾರ ತಮಟೆ ಚಳುವಳಿ ನಡೆಸಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಎನ್.ಆರ್.ವೃತ್ತ ಮಾರ್ಗದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಚಳುವಳಿ ನಡೆಸಿದ ಪ್ರತಿಭಟನಾಕಾರರು, ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ನಂತರ ಡಿಸಿ ಕಚೇರಿಗೆ ಆಗಮಿಸಿ ಜಿಲ್ಲಾಡಳಕ್ಕೆ ಮನವಿ ಸಲ್ಲಿಸಿದರು.
ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರ ಇದೆ. ಈ ಆದೇಶವನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಆ. 1 ರಂದು ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪು ಬಂದು ಒಂದು ತಿಂಗಳು ಕಳೆದರೂ ಆದೇಶ ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಲಕ್ಷೃ ತಾಳಿದೆ ಎಂದು ದೂರಿದರು.
ಪರಿಶಿಷ್ಟ ಜನಾಂಗದ 101 ಜಾತಿಗಳಿಗೆ ಸಮಾನವಾಗಿ ಮೀಸಲಾತಿ ಹಂಚಿಕೆಯಾಗಿಲ್ಲ. ಹೀಗಾಗಿ ಕಳೆದ 30 ದಶಕಗಳಿಂದ ರಾಜ್ಯಾದ್ಯಂತ ನಿರಂತರವಾಗಿ ಹೋರಾಟ ನಡೆಸಿ ಹಲವು ಹೋರಾಟಗಾರರು ಜೀವ-ಜೀವನವನ್ನೇ ಕಳೆದುಕೊಂಡಿದಾರೆ. ಪರಿಶಿಷ್ಟರ ಮೀಸಲಾತಿ ವರ್ಗಿಕರಣ ಮಾಡಲು ಕರ್ನಾಟಕ, ಆಂಧ್ರ, ಪಂಜಾಬ್ ಸೇರಿ ಹಲವು ರಾಜ್ಯಗಳಲ್ಲಿ ನಡೆದ ಹೋರಾಟಗಳ ಹಿನ್ನಲೆ ಹಲವು ರಾಜ್ಯ ಸರ್ಕಾರಗಳು ರಚಿಸಿದ ಆಯೋಗಗಳು ನೀಡಿದ ವರದಿಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶ ಸಂವಿಧಾನ ಪೀಠ ಐತಿಹಾಸಿ ತೀರ್ಪು ನೀಡಿ ವಿವಾದಕ್ಕೆ ತೆರೆ ಎಳೆದಿದೆ. ಆದ್ದರಿಂದ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.
ಅಲ್ಲದೇ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನವಾದ ಜೂ.9 ಅನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವ ಜೊತೆಗೆ ಕರ್ನಾಟಕ ರತ್ನ ಬಿದುರು ನೀಡಬೇಕು. ಬಾಕಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ರಾಜ್ಯ ಸರ್ಕಾರ ತಕ್ಷಣ ಭರ್ತಿ ಮಾಡಿಕೊಳ್ಳಬೇಕು. ಬಗರ್‌ಹುಕುಂ ಸಾಗುವಳಿತಯನ್ನು ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು ಹಾಗು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿರು.
ಪ್ರತಿಭಟನೆಯಲ್ಲಿ ದಸಂಸ ವಿಭಾಗೀಯ ಸಂಚಾಲಕ ಭಾಸ್ಕರ್, ತಾಲೂಕು ಸಂಚಾಲಕ ಎಚ್.ವಿ.ರಂಗಸ್ವಾಮಿ, ಮಹೇಶ್, ಜಯಣ್ಣ, ಆನಂದ್, ಮಂಜುನಾಥ್ ಇತರರು ಇದ್ದರು.