ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ

17blrp1
Published on

ಬೇಲೂರು: ಕಾಲೇಜಿನಲ್ಲಿರುವ ವಿದ್ಯಾರ್ಥಿಗಳ ಹಾಗೂ ವಿವಿಧ ಕ್ರೀಡೆಯಲ್ಲಿ ತೊಡಗುವ ಕ್ರೀಡಾಪಟುಗಳ ಅನುಕೂಲಕ್ಕಾಗಿ ಶೀಘ್ರವೇ ಕಾಲೇಜು ಆವರಣದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಕೆ.ಸುರೇಶ್ ಭರವಸೆ ನೀಡಿದರು.

ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25 ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿದ್ಯೆಯ ಜತೆಗೆ ಉತ್ತಮ ಸಂಸ್ಕಾರ ಅಳವಡಿಸಿಕೊಂಡು ಗುರು-ಹಿರಿಯರನ್ನು ಗೌರವಿಸಬೇಕು. ದುಶ್ಚಟಗಳಿಂದ ದೂರವಿದ್ದು ಸದೃಢ ಭಾರತ ಕಟ್ಟಲು ಮುಂದಾಗಬೇಕು. ಜಿಲ್ಲೆಯಲ್ಲಿ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರತಿಷ್ಠಿತ ಕಾಲೇಜಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಕಾಲೇಜಿನ ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಾಗಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜಿಗೆ ಅಗತ್ಯವಾಗಿ ಬೇಕಿರುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಜತೆಗೆ ಉತ್ತಮ ಫಲಿತಾಂಶ ತರಬೇಕು. ನಾನು ಶಾಸಕನಾಗುವ ಮುನ್ನ ಎಸ್‌ಎಸ್‌ಎಲ್‌ಸಿ, ಪಿಯು ಹಾಗೂ ಪದವಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಾ ಪ್ರೋತ್ಸಾಹಿಸುತ್ತಿದೆ. ಅದೇ ರೀತಿ ಈ ಬಾರಿಯೂ ಮೇ 28ರಂದು ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲ ವಿದ್ಯಾರ್ಥಿಗಳಿಗೂ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುವುದು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹಾಲಪ್ಪ ಮಾತನಾಡಿ, ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಕ್ರೀಡೆಗಳಿಗೆ ತೆರಳುವ ಕ್ರೀಡಾಪಟುಗಳಿಗೆ ಒಳಾಂಗಣ ಕ್ರೀಡಾಂಗಣ ಅವಶ್ಯವಾಗಿದೆ ಎಂದರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಘುನಾಥ್, ಪ್ರಧಾನ ಕಾರ್ಯದರ್ಶಿ ಬಿ.ಬಿ.ಶಿವರಾಜ್, ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಎಚ್.ಎಂ.ಮಹೇಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಗಿರಿಯಪ್ಪಶೆಟ್ಟಿ, ಅಧೀಕ್ಷಕ ಕೇಶವ ಕಿರಣ್, ಪ್ರಾಧ್ಯಾಪಕರಾದ ಬಾಬು ಪ್ರಸಾದ್, ಡಾ.ನಾಗೇಂದ್ರಪ್ಪ, ಮೋಹನ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net