

ಹಾಸನ: ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾಮಾನ್ಯ ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಂಆಡಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಹೆಸರು ಹೇಳಿಕೊಂಡು ಬರುವವರ ಕೆಲಸಗಳನ್ನು ಬದಿಗಿಟ್ಟು, ಜನ ಸಮಾನ್ಯರ ಸಮಸ್ಯೆಯನ್ನು ಮೊದಲು ಆಲಿಸಿ,
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಶಾಸಕರು, ಸಂಸದರು, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗೌರವ ನೀಡಬೇಕು ಎಂದರು.
ಎಲ್ಲೆಡೆ ಡೆಂೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶಾಲೆ, ಅಂಗನವಾಡಿ, ಸರ್ಕಾರಿ ನಿವೇಶನಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಆಶಾ ಹಾಗು ಅಂಗನವಾಡಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಬೇಕೆಂದು ನಿರ್ದೇಶನ ನೀಡಿದರು.
ತಾಲೂಕಿನಲ್ಲಿರುವ ನ್ಯಾಯ ಬೆಲೆ ಅಂಗಡಿಗಳ ಪಟ್ಟಿಯನ್ನು ಅಧಿಕಾರಿಗಳು ನೀಡಬೇಕು. ಕೆಲವು ಗ್ರಾಮಸ್ಥರು ಪಡಿತರಕ್ಕಾಗಿ ದೂರದ ಊರುಗಳಿಗೆ ತೆರಳಬೇಕಾಗಿದೆ. ಅಂತವರಿಗೆ ಊರಿನಲ್ಲೇ ಪಡಿತರ ಸಿಗುವಂತೆ ಕ್ರಮ ವಹಿಸಬೇಕು. ಈ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿವೆ.
ಅರ್ಜಿ ಸಲ್ಲಿಸಿದ ತಾಲೂಕಿನ 9 ಸಾವಿರ ಮಹಿಳೆಯರಿಗೆ ಗೃಹ ಲಕ್ಷ್ಮೀ ಹಣ ತಲುಪುತ್ತಿಲ್ಲ. ಸಮಸ್ಯೆಗೆ ಕಾರಣ ಏನೆಂಬುದನ್ನು ತಿಳಿದು ಶೀಘ್ರ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರದ ಯೋಜನೆ ಅರ್ಹ ಫಲಾನುಭವಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಏನೇ ಸಮಸ್ಯೆಯಿದ್ದರೂ ಜಿಲ್ಲಾಡಳಿತದೊಂದಿಗೆ ಸಂಪರ್ಕ ಹೊಂದಿ ಪರಿಹಾರ ಕಂಡುಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗೆ ಹೇಳಿದರು.
ಸಾಮಾಜಿಕ ಅರಣ್ಯದಿಂದ ರಸ್ತೆ ಬದಿ ನೆಟ್ಟಿರುವ ಗಿಡಗಳ ಪೋಷಣೆಯಾಗುತ್ತಿಲ್ಲ. ಸರ್ಕಾರದ ಅನುದಾನ ವ್ಯರ್ಥವಾಗಬಾರದು. ಗಿಡ ನೆಟ್ಟ ಬಳಿಕ ಅವುಗಳ ರಕ್ಷಣೆಗೆ ಪ್ರಾಮುಖ್ಯತೆ ಸಿಗಬೇಕೆಂದು ಸೂಚಿಸಿದರು.
ತಹಶೀಲ್ದಾರ್ ಶ್ವೇತಾ ರವೀಂದ್ರ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.