ಕನಕದಾಸರ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

06Rajesh10
Published on

ಚಾಮರಾಜನಗರ: ನಗರದಲ್ಲಿ ನ.18ರಂದು ಭಕ್ತಶ್ರೇಷ್ಠ ಕನಕದಾಸರ ಜಯಂತಿಯನ್ನು ಎಲ್ಲರ ಸಹಕಾರದೊಂದಿಗೆ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕದಾಸರ ಜಯಂತಿ ಆಚರಣೆ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಭಕ್ತಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಪ್ರವಾಸಿ ಮಂದಿರದಿಂದ ಹೊರಡುವ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಜಿಲ್ಲಾಡಳಿತ ಭವನ ತಲುಪಲಿದೆ. ಅಲಂಕೃತ ಬೆಳ್ಳಿರಥದಲ್ಲಿರಿಸಿದ ಕನಕದಾಸರ ಭಾವಚಿತ್ರದ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.

ಆಹ್ವಾನ ಪತ್ರಿಕೆಯನ್ನು ಶಿಷ್ಟಾಚಾರದ ಪ್ರಕಾರವೇ ಮುದ್ರಿಸಿ ಎಲ್ಲ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಮಂತ್ರಿಸಬೇಕು. ಕನಕದಾಸರ ಮಾಹಿತಿಯುಳ್ಳ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಬೇಕು. ವೇದಿಕೆ ಕಾರ್ಯಕ್ರಮದ ಬ್ಯಾಕ್‌ಡ್ರಾಪ್ ಆಕರ್ಷಕವಾಗಿ ಮುದ್ರಣವಾಗಬೇಕು. ಕನಕದಾಸರ ಬಗ್ಗೆ ಹೆಚ್ಚಿನ ಮಾಹಿತಿ ಇರುವ ಸಂಪನ್ಮೂಲ ವ್ಯಕ್ತಿ ಮುಖ್ಯಭಾಷಣ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಕಾರ್ಯಕ್ರಮದಂದು ರಂಗಮಂದಿರದ ಹೊರ ಆವರಣ ಹಾಗೂ ಒಳಾವರಣಗಳು ಸ್ವಚ್ಛತೆಯಿಂದ ಕೂಡಿರುವಂತೆ ನೋಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ನಗರಸಭೆ ಹಿರಿಯ ಆರೋಗ್ಯ ನೀರಿಕ್ಷಕರಾದ ಸುಷ್ಮಾ, ಸಮಾಜದ ತಾಲೂಕು ಅಧ್ಯಕ್ಷ ಆರ್.ಉಮೇಶ್, ಪ್ರಧಾನ ಕಾರ್ಯದರ್ಶಿ ಬಿ.ಶಿವಲಿಂಗೇಗೌಡ, ಮುಖಂಡರಾದ ಸೂರ್ಯಕುಮಾರ್, ಮಹೇಶ್, ಮರಿಸ್ವಾಮಿ, ಹೊನ್ನಳ್ಳಿ ಬಸವಣ್ಣ, ನವೀನ್ ಹೊಂಗನೂರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net