

ಮಡಿಕೇರಿ: ಕನ್ನಡ ಮಾಧ್ಯಮ ಶಾಲೆಗೆ ಸೇರಲು ಯಾವುದೇ ಹಿಂಜರಿಕೆ, ಕೀಳರಿಮೆ ಇರಬಾರದು ಎಂದು ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ ಹೇಳಿದರು.
ಗೋಣಿಕೊಪ್ಜದ ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಓದಿನತ್ತ ಹೆಚ್ಚು ಗಮನಹರಿಸಬೇಕು. ನಿರಂತರ ಅಧ್ಯಯನದ ಮೂಲಕ ಉನ್ನತ ವ್ಯಕ್ತಿಯಾಗಿ ಬೆಳೆಯಬೇಕು. ಮಹಾನ್ ವ್ಯಕ್ತಿಗಳನ್ನು ಸ್ಮರಿಸುವುದು ಮುಖ್ಯವಲ್ಲ. ಅವರ ಆದರ್ಶಗಳು, ಗುಣಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ಹೇಳಿದರು.
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಮಾತನಾಡಿ, ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ನೋಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿಯಾದರೆ, ಮನೆಗಳಲ್ಲಿ ಮಕ್ಕಳನ್ನು ಸರಿಯಾದ ದಾರಿಯಲ್ಲಿ ನಡೆದುಕೊಳ್ಳುವಂತೆ ತಿದ್ದಿ ಬುದ್ದಿ ಹೇಳುವುದು ಪಾಲಕರ ಕರ್ತವ್ಯ ಎಂದರು.
ಕ್ಷೇತ್ರ ಸಮನ್ವಯ ಅಧಿಕಾರಿ ವನಜಾಕ್ಷಿ ಮಾತನಾಡಿ, ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆಯಬೇಕು. ಈ ಮೂಲಕ ಶಾಲೆಯ ಹೆಸರನ್ನು ಉಳಿಸಿ ಬೆಳೆಸಬೇಕು ಎಂದು ಸಲಹೆ ನೀಡಿದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೆ ವೇಳೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆ ಮುಖ್ಯ ಶಿಕ್ಷಕ ಲಾಲ್ ಕುಮಾರ್, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಉತ್ತಪ್ಪ, ಆಶಾ ಸುಬ್ಬಯ್ಯ, ಶಿಕ್ಷಕರಾದ ರಾಜೇಗೌಡ, ನಂದೀಶ್, ಕವಿತಾ ಸೇರಿದಂತೆ ಇತರರು ಇದ್ದರು.