ಕನಿಷ್ಠ ೧೫ ಸಾವಿರ ಮಾಸಿಕ ಗೌರವಧನ ನೀಡಿ

bkt-2-3
ಬಾಗಲಕೋಟೆ ಜಿಲ್ಲಾಡಳಿತ ಭವನ ಎದುರು ಆಶಾ ಕಾರ್ಯಕರ್ತೆಯರು ಗುರುವಾರ ಪ್ರತಿಭಟನೆ ನಡೆಸಿದರು.
Published on

ಬಾಗಲಕೋಟೆ: ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಮತ್ತು ರಾಜ್ಯ ಸರ್ಕಾರದ ನಿಶ್ಚಿತ ಮಾಸಿಕ ಗೌರವಧನ ಸೇರಿದಂತೆ ಒಟ್ಟು ೧೫,೦೦೦ ಮಾಸಿಕ ನಿಶ್ಚಿತ ಗೌರವಧನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನ ಎದುರು ಆಶಾ ಕಾರ್ಯಕರ್ತೆಯರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ರಾಜ್ಯ, ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಡಳಿತ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ಸಭೆ ಉದ್ದೇಶಿಸಿ ಸಂಘಟನೆ ಜಿಲ್ಲಾಧ್ಯಕ್ಷೆ ಶೀಲಾ ಮೆಳ್ಳಿಗೇರಿ ಮಾತನಾಡಿ, ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಮತ್ತು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಜತೆಗೆ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ೩ ಸಾವಿರ ರೂ. ಒಟ್ಟುಗೂಡಿಸಿ ಮಾಸಿಕ ೧೫ ಸಾವಿರ ರೂ. ಗೌರವಧನ ನಿಗಧಿ ಮಾಡಬೇಕು. ಬೆಂಗಳೂರಿನಲ್ಲಿ ಹೋರಾಟ ನಡೆಸಿದಾಗ ಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಅಂತ ಸಿಎಂ ಭರವಸೆ ನೀಡಿದ್ದರು. ಈ ವರೆಗೂ ಈಡೇರಿಲ್ಲ ಎಂದು ಕಿಡಿಕಾರಿದರು.

ಆಶಾ ಕಾರ್ಯಕರ್ತೆಯರ ಸೇವೆ, ಕಾರ್ಯದ ಬಗ್ಗೆ ಸರ್ಕಾರ ಅರಿತುಕೊಳ್ಳಬೇಕು. ಹಗಲಿರಳು ಆರೋಗ್ಯ ಸೇವೆಯಲ್ಲಿ ತೊಡಗಿದ್ದರೂ ಕನಿಷ್ಠ ಜೀವನ ನಡೆಸುವ ಗೌರವಧನ ಇಲ್ಲದಂತಾಗಿದೆ. ಸರ್ಕಾರ ನಮ್ಮ ಸಮಸ್ಯೆಗಳನ್ನು ಕೇವಲ ಆಲಿಸಿ ಸಭೆ ನಡೆಸುತ್ತಿದೆ. ಆದರ ಪರಿಹಾರ ಮಾತ್ರ ಸಿಗುತ್ತಿಲ್ಲ. ಹೀಗಾಗಿ ಜ.೭ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅನಿರ್ಧಿಷ್ಟಾವಧಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ೨ ಸಾವಿರ ರೂ. ಗೌರವಧನ ಹೆಚ್ಚಿಸಬೇಕು. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಕೊಳ್ಳುತ್ತಿರುವುದನ್ನು ಕೈಬಿಡಬೇಕು. ಮೊಬೈಲ್ ಡಾಟಾ ಒದಗಿಸಿ, ಅದಕ್ಕೂ ಪ್ರೋತ್ಸಾಹಧನ ನಿಗದಿ ಮಾಡಬೇಕು. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೋ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

೬೦ ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ೩ ಲಕ್ಷ ರೂ.ಹೆಚ್ಚಿಸಬೇಕು. ತೀವ್ರವಾದ ಅನಾರೋಗ್ಯ ಚಿಕಿತ್ಸೆ ಪಡೆಯುವ ಅವಽಯಲ್ಲಿ ಕನಿಷ್ಠ ೩ ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು. ಆಶಾ ಸೇವೆಯಲ್ಲಿ ಇದ್ದಾಗ ಆಗುವ ಅನಾಹುತುಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿವರ್ಷ ಪ್ರತಿ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಮಾಡಬೇಕು. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್‌ಐ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಶೈನಾಜಾ ಜಾಂಗಿ, ರುಕ್ಸಾನಾ ನಾಗರಾಳ, ಸುರೇಖಾ ಕಾಳೆ, ಸುನಿತಾ ಜಂಬಗಿ, ಮಂಜುಳಾ ಬಿ., ಅನಿತಾ ಕುಂಬಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net