ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ

Decision to celebrate Kannada Rajyotsava grandly
Published on

ವಿಜಯಪುರ:ಕನ್ನಡ ರಾಜ್ಯೋತ್ಸವದ ಆಚರಣೆ ಹಬ್ಬದ ವಾತಾವರಣದ ರೀತಿಯಲ್ಲಿ ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಆಯಾ ಇಲಾಖೆ ಅಧಿಕಾರಿಗಳು ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಿಸಿ, ಕನ್ನಡಮಯ ಹಬ್ಬದ ವಾತಾವರಣ ಇರುವಂತೆ ಅಗತ್ಯ ಯೋಜನೆ ರೂಪಿಸಬೇಕು. ರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಡಾ. ಬಿ.ಆರ್​. ಅಂಬೇಡ್ಕರ್​ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ಅಂದು ಬೆಳಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನಡೆಯಲಿದ್ದು, ನಂತರ ಬೆಳಗ್ಗೆ 7.30ಕ್ಕೆ ಇಲ್ಲಿನ ಸಿದ್ಧೇಶ್ವರ ದೇವಸ್ಥಾನದಿಂದ ಭುವನೇಶ್ವರ ದೇವಿಯ ಭಾವಚಿತ್ರದ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳು ನಿರ್ಮಿಸಿರುವ ಸ್ತಬ್ಧಚಿತ್ರಗಳು, ಕಲಾ ತಂಡದೊಂದಿಗೆ ನಗರದ ವಿವಿಧ ವೃತ್ತಗಳ ಮೂಲಕ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಲಿದ್ದು, ಅಧಿಕಾರಿಗಳಿಗೆ ವಹಿಸಿದ್ದ ಎಲ್ಲ ಕೆಲಸ ಕಾರ್ಯಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದರು.

ಸಂಜೆ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಕನ್ನಡ ನಾಡು ನುಡಿ ಹಾಗೂ ನಾಡಿನ ವೈವಿಧ್ಯತೆ ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಹಾಗೂ ಭಾಗವಹಿಸುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಪ್ರಮಾಣಪತ್ರ ವಿತರಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಜಿ.ಪಂ. ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಿಕಿ, ಹೆಸ್ಕಾಂ ಅಧೀಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಸೌದಾಗರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ವೀರಯ್ಯ ಸಾಲಿಮಠ, ಸಾರಿಗೆ ಇಲಾಖೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ ಮುದ್ದೇಬಿಹಾಳ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕರವೇ ಜಿಲ್ಲಾಧ್ಯಕ್ಷ ಎಂ.ಸಿ. ಮುಲ್ಲಾ, ಅಡಿವೆಪ್ಪ ಸಾಲಗಲ್​, ಫಯಾಜ್​ ಕಲಾದಗಿ, ದೇವೆಂದ್ರ ಮಿರೆಕರ ಮತ್ತಿತರರಿದ್ದರು.

ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಡಾ. ಆನಂದ ಕೆ. ಮಾತನಾಡಿದರು. ರಿಷಿ ಆನಂದ , ಸೋಮನಿಂಗ ಗೆಣ್ಣೂರ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net