ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿ

01 YERRISWAMY 03
Published on

ಬಳ್ಳಾರಿ : ಕರ್ನಾಟಕ ನೆಲದ ಕನ್ನಡಿಗರಿಗೇ ಉದ್ಯೋಗ ನೀಡುವ ಕಾಯ್ದೆ ರೂಪಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯಿಂದ ಡಿಸಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಯ್‌ಧಕ್ಷ ಡಿ.ಕಗ್ಗಲ್ ಶಂಕರ್ ಮಾತನಾಡಿ, ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು. ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶ ಕಾನೂನಿನಲ್ಲಿ ಜಾರಿಗೆ ತರಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಆಗ್ರಹಿಸಿದರು. ಹದಿನೈದು ವರ್ಷ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆ ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ನೀಡಲಾಗಿರುವ ಮಾನ್ಯತೆಗಳನ್ನು ಹಿಂಪಡೆಯಬೇಕು. ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮ ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಿ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net