ಕೊಪ್ಪ ಭಾಗದ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ

05M.D.R.6
ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ದಿನೇಶ್ ಗೂಳಿಗೌಡ, ಸಿ.ಪ್ರೇಮಕುಮಾರ್, ಇಂದ್ರಮ್ಮ, ವೆಂಕಣರಮಣೇಗೌಡ, ಸೋಮಶೇಖರ್ ಇದ್ದರು.
Published on

ಮದ್ದೂರು: ಕೊಪ್ಪ ಭಾಗದ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಿದ್ದು ಮುಂದಿನ ದಿನಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುವುದು ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಜನರ ಅಹವಾಲು ಸ್ವೀಕರಿಸಿ ನಂತರ ಅವರು ಮಾತನಾಡಿದರು.

ಗೌಡ್ರೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಬೇಕು ಎಂಬುದು ಈ ಭಾಗದ ಬಹುದಿನದ ಬೇಡಿಕೆಯಾಗಿದೆ. ಈಗಾಗಲೇ ಸಮಾಜ ಕಲ್ಯಾಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು ಮುಂದಿನ ದಿನಗಳಲ್ಲಿ ಸುಸಜ್ಜಿತವಾದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ. ಮಹಿಳಾ ಒಕ್ಕೂಟದ ಮನವಿಯಂತೆ ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಮಹಿಳಾ ಭವನ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೊಪ್ಪದಲ್ಲಿ ಪ್ರವಾಸಿ ಮಂದಿರ ನಿರ್ಮಾಣ, ಹೊಸ ನಾಡಕಚೇರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರವೇ ಚಾಲನೆ ನೀಡಲಾಗುವುದು. ಕೊಪ್ಪ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ಧಿ ಮಾಡುವ ಮೂಲಕ ಮಾದರಿ ಗ್ರಾಮವನ್ನಾಗಿ ರೂಪಿಸಲಾಗುವುದು. ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್‌ನಿಂದ 136 ಕೋಟಿ ರೂ.ಗಳನ್ನು ಬಡ್ಡಿ ರಹಿತ ಸಾಲ ನೀಡಲಾಗಿದೆ. ಅಷ್ಟೇ ಅಲ್ಲದೆ ವಿವಿಧ ಇಲಾಖೆಗಳ ಮೂಲಕ ಹತ್ತಾರು ಯೋಜನೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಕಾಂಗ್ರೆಸ್‌ನ ಸಂಭವನೀಯ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಉಪ ವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಸೋಮಶೇಖರ್, ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ್, ಗ್ರಾಪಂ ಅಧ್ಯಕ್ಷ ಸಿ.ಪ್ರೇಮಕುಮಾರ್, ಉಪಾಧ್ಯಕ್ಷೆ ಇಂದ್ರಮ್ಮ, ಸದಸ್ಯರಾದ ಗೋವರ್ಧನ್, ಮಹಾಲಕ್ಷ್ಮೀ, ರತ್ನಮ್ಮ, ಮುಖಂಡರಾದ ಸಿ.ಕೃಷ್ಣೇಗೌಡ, ಬೆಕ್ಕಳಲೆ ರಘು, ಕ್ರಾಂತಿ ಸಿಂಹ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net