

ಹುಬ್ಬಳ್ಳಿ : ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅವರು ಗುರುವಾರದಂದು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.
ಮೋಹನ ಲಿಂಬಿಕಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಕಾನೂನು ಸಲಹೆಗಾರರೂ ಆಗಿದ್ದರು.
2008ರಲ್ಲಿ ವಿಧಾನ ಪರಿಷತ್ಗೆ ವಾಯವ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದಿದ್ದರು. 2013ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಬಿಜೆಪಿ ತೊರೆದು, ಕೆಜೆಪಿ ಕಟ್ಟಿದ ಸಂದರ್ಭದಲ್ಲಿಯೂ ಮೋಹನ ಲಿಂಬಿಕಾಯಿ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಕೆಜೆಪಿಗೆ ಸೇರಿದ್ದರು. ಆ ಸಂದರ್ಭದಲ್ಲಿ ಮೋಹನ ಲಿಂಬಿಕಾಯಿ ಇನ್ನೂ ವಿಧಾನ ಪರಿಷತ್ ಸದಸ್ಯರಾಗಿದ್ದರು. ಸದಸ್ಯತ್ವದ ಅವಧಿ ಇನ್ನೂ ಬಾಕಿ ಇರುವಾಗಲೇ ರಾಜೀನಾಮೆ ನೀಡಿದ್ದರು. ಕೆಜೆಪಿ ಅಭ್ಯರ್ಥಿಯಾಗಿ ಹುಬ್ಬಳ್ಳಿ - ಧಾರವಾಡ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಿ, ಸೋತಿದ್ದರು. ನಂತರ ಯಡಿಯೂರಪ್ಪ ಅವರೊಂದಿಗೆ ಮತ್ತೆ ಬಿಜೆಪಿಗೆ ಬಂದಿದ್ದರು.
ಇದೀಗ ಮತ್ತೆ ಬಿಜೆಪಿ ತೊರೆದಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಹೀಗಾಗಿ, ರಾಜೀನಾಮೆ ನೀಡುತ್ತಿರುವುದಾಗಿ ಮೋಹನ ಲಿಂಬಿಕಾಯಿ ತಿಳಿಸಿದ್ದಾರೆ. ಹುಬ್ಬಳ್ಳಿ- ಧಾರವಾಡದ ಪಶ್ಚಿಮ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿ ಲಿಂಬಿಕಾಯಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಮಾತನಾಡಿರುವ ಅವರು, ಯಾವುದೇ ಷರತ್ತು ಅಥವಾ ಬೇಡಿಕೆ ಇಡದೇ ಕಾಂಗ್ರೆಸ್ ಸೇರುತ್ತಿರುವುದಾಗಿ ತಿಳಿಸಿದ್ದಾರೆ.