

ಬೀದರ್: ಜಿಲ್ಲೆಯಲ್ಲಿ ಕರೊನಾ ಪಾಸಿಟಿವ್ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಎರಡನೇ ಅಲೆ ಪ್ರಾರಂಭವಾಗುವ ಸಾಧ್ಯತೆಗಳಿರುವ ಕಾರಣ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿಚಡ್೯ ವಿನ್ಸೆಂಟ್ ಡಿಸೋಜಾ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕರೊನಾ ನಿಯಂತ್ರಣ ಸಭೆಯಲ್ಲಿ ಮಾತನಾಡಿ, ಸದ್ಯಕ್ಕೆ ಪದವಿ ಕಾಲೇಜುಗಳು ಆರಂಭಗೊಂಡಿರುವುದರಿಂದ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ವಹಿಸಬೇಕು. ಎಲ್ಲ ಕಾಲೇಜುಗಳಲ್ಲಿ ಆರೋಗ್ಯ ತಪಾಸಣೆ ಅಚ್ಚುಕಟ್ಟಾಗಿ ನಡೆಯಬೇಕು. ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬೇಕಾಗಿರುವ ಆಕ್ಸಿಜನ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಲಕರಣೆ ಪೂರೈಸಲಾಗಿದೆ. ಇನ್ನೂ ಬೇಕಿದ್ದಲ್ಲಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿ ತರಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಹೋಮ್ ಐಸೋಲೇಷನ್ ನಲ್ಲಿರುವ ರೋಗಿಗಳ ಮನೆಗೆ ವೈದ್ಯರು ಮತ್ತು ಸಿಬ್ಬಂದಿ ನಿಯಮಿತವಾಗಿ ಭೇಟಿ ನೀಡಿ, ಅಗತ್ಯ ಚಿಕಿತ್ಸೆ ನೀಡಬೇಕು. ಈ ವಿಷಯದಲ್ಲಿ ಯಾವುದೇ ರೀತಿಯ ಲೋಪಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ರಾಮಚಂದ್ರನ್ ಮಾತನಾಡಿ, ಕರೊನಾ ಪ್ರಕರಣಗಳ ಪತ್ತೆ ಹಚ್ಚುವಿಕೆಯಲ್ಲಿ ಬೀದರ್ ಜಿಲ್ಲೆಯು ರಾಜ್ಯದ ರ್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕೆಲ ದಿನಗಳಿಂದ ಹೊಸ ಪ್ರಕರಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಗಳನ್ನು ಹಂತ ಹಂತವಾಗಿ ತೆಗೆಯಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿ.ಜಿ.ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಸೋಂಕಿತರ ಗುಣಮಖ ಪ್ರಮಾಣ ಶೇ.96ರಷ್ಟಿದೆ. ಸದ್ಯ ಪಾಸಿಟಿವ್ ದರ ಶೇ. 0.4 ರಷ್ಟಿದೆ. ಕಾಲೇಜುಗಳು ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷೆಗೆ ಇಲಾಖೆಯಿಂದ ಗುರಿ ನಿಗದಿಪಡಿಸಿದ್ದು, ಅದರಂತೆ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್, ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ್, ಭುವನೇಶ ಪಾಟೀಲ್, ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣಾರೆಡ್ಡಿ, ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.