ಕರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ

Covid
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದರ ಜತೆಗೆ ಪರೀಕ್ಷೆ ಹೆಚ್ಚಳ ಮಾಡಿ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡುವುದರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನೂ ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ ಸೋಂಕಿಗೊಳಗಾಗಿರುವ ಸಚಿವರು ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಆದರ್ಶ ಆಸ್ಪತ್ರೆಯಿಂದ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕರೊನಾ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ನಾಲ್ಕೈದು ದಿನಗಳಿಂದ 140ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಎರಡನೇ ಅಲೆಯ ಆತಂಕ ಸೃಷ್ಟಿಯಾಗಿದೆ. ಇದರ ನಿಯಂತ್ರಣಕ್ಕೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸೋಂಕಿನ ಪ್ರಮಾಣ ಕಡಿಮೆಗೊಳಿಸಲು ಮುಂದಾಗಬೇಕು ಎಂದರು.

ಮಾರ್ಗಸೂಚಿ ಕಡ್ಡಾಯ ಪಾಲನೆ: ಸಾರ್ವಜನಿಕರು ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ ಮೊದಲಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಲ್, ಪೆಟ್ರೋಲ್ ಬಂಕ್, ವಾಣಿಜ್ಯ ಚಟುವಟಿಕೆದಾರರು ಗ್ರಾಹಕರಿಗೆ ಕರೊನಾ ಮಾರ್ಗಸೂಚಿ ಪಾಲಿಸುವಂತೆ ಎಚ್ಚರಿಸಬೇಕು. ರಾತ್ರಿ ಕರ್ಪ್ಯೂ ನಿಯಮ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕೇರಳ ಗಡಿಯಲ್ಲಿ ನೆಗೆಟಿವ್ ರಿಪೋರ್ಟ್ ತಪಾಸಣೆ ಮತ್ತಿತರ ನಿಯಂತ್ರಣ ಕ್ರಮ ಬಿಗಿಗೊಳಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿಯೂ ಸೋಂಕಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಸಭೆ ಸಮಾರಂಭಗಳಲ್ಲಿ ಕೋವಿಡ್ ಮಾರ್ಗಸೂಚಿ ಚಾಚೂ ತಪ್ಪದೆ ಪಾಲಿಸಬೇಕು. ಇವುಗಳ ಮೇಲುಸ್ತುವಾರಿಯನ್ನು ಸ್ಥಳೀಯ ಸಂಸ್ಥೆಗಳು, ಪೋಲಿಸ್ ಇಲಾಖೆ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಪಂ ಸಿಇಒ ಡಾ.ಕುಮಾರ್, ಮನಪಾ ಆಯುಕ್ತ ಅಕ್ಷಿ ಶ್ರೀಧರ್, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾನೆ, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ಮತ್ತಿತರರಿದ್ದರು.

ಬೆಡ್, ವೆಂಟಿಲೇಟರ್ ವ್ಯವಸ್ಥೆ: ಮುಂದಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಅವರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್‌ಗಳ ವ್ಯವಸ್ಥೆ, ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆಗಳನ್ನು ಮಾಡಬೇಕು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4978 ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಕೋವಿಡ್ ಚಿಕಿತ್ಸೆ ಪಡೆಯಲು ಅನೂಕೂಲವಾಗುವಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದ ಸಚಿವರು, ಔಷಧ, ಪಿಪಿಇ ಕಿಟ್, ಮಾಸ್ಕ್, ಟೆಸ್ಟಿಂಗ್ ಕಿಟ್ ಸಹಿತ ಅತ್ಯವಶ್ಯಕ ಪರಿಕರಗಳ ದಾಸ್ತಾನು ಕೊರತೆ ಉಂಟಾದರೆ ಸರ್ಕಾರದಿಂದ ಸರಬರಾಜು ಆಗುವಂತೆ ನೋಡಿಕೊಳ್ಳಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಮೇಲುಸ್ತುವಾರಿಗಳನ್ನು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಿದರು. ಪಾಸಿಟಿವ್ ವರದಿ ಬಂದ ಗರ್ಭಿಣಿಯರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಡಯಾಲಿಸಿಸ್ ಸಹಿತ ಇತರ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಶುಶ್ರೂಷೆಗೆ ಕೊರತೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದರು.

20 ದಿನಗಳೊಳಗೆ ಎಲ್ಲರಿಗೂ ಲಸಿಕೆ: ಯುವಜನತೆ ಹೆಚ್ಚು ಸೋಂಕು ಪೀಡಿತರಾಗುತ್ತಿದ್ದು, ಮನೆಯಲ್ಲಿ ಹಿರಿಯರಿಗೂ ಸೋಂಕು ಹರಡುವ ಸಾಧ್ಯತೆ ಇದೆ. ಅವರು ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರ ಜತೆಗೆ ಇತರ ಕಾಯಿಲೆಗಳಿಂದ ಬಳಲುತ್ತಿರುತ್ತಾರೆ. ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ಕೋವಿಡ್ ನಿರೋಧಕ ಲಸಿಕೆಯನ್ನು ತಪ್ಪದೆ ಪಡೆಯುವಂತೆ ಪ್ರೇರೇಪಿಸಬೇಕು. ಜಿಲ್ಲೆಯಲ್ಲಿ 40,16,121 ಜನರು 45 ವರ್ಷದ ಮೇಲ್ಪಟ್ಟ ವಯೋಮಾನದವರಿದ್ದು, ಈವರೆಗೆ 50 ಸಾವಿರ ಜನರಿಗೆ ಸೋಂಕು ನಿರೋಧಕ ಚುಚ್ಚುಮದ್ದನ್ನು ನೀಡಲಾಗಿದೆ. ಮುುಂದಿನ 20 ದಿನಗಳ ಒಳಗಾಗಿ ಪ್ರತಿಯೊಬ್ಬರಿಗೂ ಚುಚ್ಚುಮದ್ದು ನೀಡಬೇಕು. ಇದು ಆಂದೋಲನದ ರೀತಿ ಸಂಘ ಸಂಸ್ಥೆಗಳು ಸೇರಿದಂತೆ ಯುವಕ ಮಂಡಲಗಳು, ಆಶಾ ಕಾರ್ಯಕರ್ತೆಯರ ಸಹಭಾಗಿತ್ವದಲ್ಲಿ ನಡೆಯಬೇಕು ಎಂದು ಸಚಿವ ಕೋಟ ತಿಳಿಸಿದರು.

ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ: ಯಾವುದೇ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ, ಅಗತ್ಯ ಮುಂಜಾಗೃತಾ ಕ್ರಮ ವಹಿಸಿ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆಯು ಎಲ್ಲ ಆಸ್ಪತ್ರೆಗಳಲ್ಲಿಯೂ ಲಭ್ಯವಾಗಿ ಸಾರ್ವಜನಿಕರು ಚಿಕಿತ್ಸೆ ಪಡೆಯುವಂತಾಗಬೇಕು. ಇದಕ್ಕೆ ಸಹಕರಿಸಲು ಆರೋಗ್ಯ ಮಿತ್ರರನ್ನು ಆಸ್ಪತ್ರೆಗಳಲ್ಲಿ ನೇಮಕ ಮಾಡಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net