ಕರೊನಾ ನಿಯಂತ್ರಿಸಲು ಅಗತ್ಯ ಕ್ರಮ, ಉಸ್ತುವಾರಿ ಸಚಿವ ಅಶೋಕ್ ಅಭಿಮತ ಜಿಲ್ಲೆಯಲ್ಲಿ ಕರೊನಾ ತಡೆ ಜಾಗೃತಿಗೆ ಚಾಲನೆ

must
Published on

ಬೆಂಗಳೂರು ಗ್ರಾಮಾಂತರ: ಕರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶಕ್ತಿ ಮೀರಿ ಶ್ರಮಿಸುತ್ತಿದ್ದು, ಎಲ್ಲ ಬಗೆಯ ಮುಂಜಾಗ್ರತೆ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ನಿಯಮ ಪಾಲನೆ ಮಾಡಬೇಕು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಮನವಿ ಮಾಡಿದರು.

ಕರೊನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಬೃಹತ್ ಎಲ್ಇಡಿ ಪರದೆ ಹೊಂದಿರುವ ಮೊಬೈಲ್ ವಾಹನದ ಪ್ರಚಾರ ಕಾರ್ಯಕ್ರಮಕ್ಕೆ ಬುಧವಾರ ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಕರೊನಾ ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಲು ಬೃಹತ್ ಎಲ್ಇಡಿ ಪರದೆ ಹೊಂದಿರುವ ಮೊಬೈಲ್ ವಾಹನ ಬಳಸಿಕೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ವಾಹನ ಸಂಚರಿಸಲಿದ್ದು, ಸಾರ್ವಜನಿಕರು ಈ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯ ಸರ್ಕಾರ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಕರೊನಾ ತಡೆ ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರಾಜ್ಯದಲ್ಲಿ ಕರೊನಾ ಮಹಾಮಾರಿಯನ್ನು ಸಂಪೂರ್ಣ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಅವಿರತ ಶ್ರಮಿಸುತ್ತಿದೆ ಎಂದರು.

ಜಿಪಂ ಪ್ರಭಾರ ಅಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿನ 105 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 180 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಈ ಗ್ರಾಮಗಳಲ್ಲಿ ವಾಹನದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಜಿಲ್ಲೆಯ ನಾಲ್ಕು ತಾಲೂಕುಗಳಿಂದ ತಲಾ 45 ಗ್ರಾಮಗಳಂತೆ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 2 ಗ್ರಾಮಗಳಲ್ಲಿ ಜಾಗೃತಿ ಮೂಡಲಾಗುವುದು. 18 ದಿನಗಳ ಜಾಗೃತಿ ಕಾರ್ಯಕ್ರಮ ಇದಾಗಿದ್ದು, ಜಿಲ್ಲೆಯಲ್ಲಿ 2 ಎಲ್ಇಡಿ ವಾಹನ ಸಂಚರಿಸಲಿದ್ದು, ಪ್ರತಿದಿನ ತಲಾ 5 ಗ್ರಾಮಗಳಂತೆ ಎರಡು ವಾಹನಗಳಿಂದ 10 ಗ್ರಾಮಗಳಲ್ಲಿ ಸಂಚರಿಸಲಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ.ಚನ್ನಣ್ಣನವರ್, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್.ಎಂ.ನಾಗರಾಜು, ಮುಖ್ಯಯೋಜನಾಧಿಕಾರಿ ವಿನುತಾರಾಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಸಹಾಯಕ ನಿರ್ದೇಶಕಿ ಹೇಮಾವತಿ ಇದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರ ಕರೊನಾ ಜಾಗೃತಿ ಮೂಡಿಸುವ ಎಲ್ಇಡಿ ವಾಹನಕ್ಕೆ ಉಸ್ತುವಾರಿ ಸಚಿವ ಆರ್.ಅಶೋಕ್ ಚಾಲನೆ ನೀಡಿದರು. ಶಾಸಕ ವೆಂಕಟರಮಣಯ್ಯ, ಜಿಪಂ ಪ್ರಭಾರ ಅಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net