ಕರೊನಾ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ

carona logo
Published on

ಶಿರಹಟ್ಟಿ: ಕರೊನಾ ವಾಸಿಯಾಗುವ ರೋಗ. ಇದರ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ಆದರೆ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಪಾಡಿಕೊಳ್ಳುವ ಜತೆಗೆ ಸ್ಯಾನಿಟೈಸರ್ ಬಳಸಬೇಕು ಎಂದು ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಹೇಳಿದರು.

ತಾಲೂಕಾಡಳಿತ ಕಚೇರಿಯ ಸಭಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕೋವಿಡ್-19 ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ಕರೊನಾ ಸೋಂಕಿನ ಲಕ್ಷಣ ಕಂಡು ಬಂದರೆ ಗ್ರಾಮ ಲೆಕ್ಕಾಧಿಕಾರಿಗಳು ತಕ್ಷಣ ತಾಲೂಕು ಕಚೇರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಗ್ರಾಮಗಳಲ್ಲಿ ಮದುವೆ ಸಮಾರಂಭ ಏರ್ಪಡಿಸಿದ್ದಲ್ಲಿ 50 ಜನ ಹಾಗೂ ಅಂತ್ಯಸಂಸ್ಕಾರದಲ್ಲಿ 20 ಜನ ಮಾತ್ರ ಭಾಗವಹಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ಗ್ರಾಮ ಲೆಕ್ಕಾಧಿಕಾರಿಗಳದ್ದಾಗಿದೆ. ಈಗಾಗಲೇ ಆಶಾ ಕಾರ್ಯಕರ್ತೆಯರಿಗೆ ಗ್ರಾಮಗಳಲ್ಲಿ ಸಂಚರಿಸಿ ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ ಇರುವವರ ಹೆಸರು ಪಟ್ಟಿ ಮಾಡಲು ಸೂಚನೆ ನೀಡಲಾಗಿದೆ. ಅವರ ಕಾರ್ಯ ನಿರ್ವಹಣೆ ಮೇಲೆ ನಿಗಾ ವಹಿಸುವ ಜವಾಬ್ದಾರಿ ಸಹ ಗ್ರಾಮ ಲೆಕ್ಕಾಧಿಕಾರಿಗಳದ್ದಾಗಿದೆ ಎಂದರು.

ಸಿಪಿಐ ವಿಕಾಸ ಲಮಾಣಿ ಮಾತನಾಡಿ, ಕೋವಿಡ್-19 ನಿಯಂತ್ರಣಕ್ಕಾಗಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರಿಗೆ ಯಾರಾದರೂ ತೊಂದರೆ ಮಾಡಿದರೆ ಅಥವಾ ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಮೃತರಾದವರ ಅಂತ್ಯ ಸಂಸ್ಕಾರಕ್ಕೆ ಅಡ್ಡಿ ಮಾಡಿದರೆ ತಕ್ಷಣ ನಮ್ಮ ಗಮನಕ್ಕೆ ತಂದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಸುಭಾಸ ದೈಗೊಂಡ್ ಮಾತನಾಡಿ, ತಾಲೂಕು ಆಸ್ಪತ್ರೆಯಲ್ಲಿ ಆರ್​ಎಬಿ ಉಪಕರಣದೊಂದಿಗೆ ಕೋವಿಡ್-19 ಪರೀಕ್ಷೆ ಕೈಗೊಳ್ಳಲಾಗುತ್ತಿದೆ. ಇದರಿಂದ ಶೀಘ್ರ ಫಲಿತಾಂಶ ತಿಳಿಯಲಿದೆ ಎಂದು ತಿಳಿಸಿದರು.

ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಚಂದ್ರು ಲಮಾಣಿ, ಪಿಎಸ್​ಐ ಎಸ್.ಎಂ. ನಾಯಕ, ಸಮಾಜ ಕಲ್ಯಾಣ ಅಧಿಕಾರಿ ಎಸ್.ಬಿ. ಹರ್ತಿ, ಅಕ್ಷರ ದಾಸೋಹ ಅಧಿಕಾರಿ ಎಸ್.ಎ. ನದಾಫ್ ಮೊದಲಾದವರು ಉಪಸ್ಥಿತರಿದ್ದರು.

ನಿಯಮ ಪಾಲಿಸದಿದ್ದರೆ ದಂಡ: ಶಿರಹಟ್ಟಿ ಪಟ್ಟಣದಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂತೆ ರದ್ದು ಮಾಡಲಾಗಿದೆ. ವ್ಯಾಪಾರಸ್ಥರು ದಿನಸಿ ಖರೀದಿಗೆ ಬರುವವರನ್ನು ನಿಯಂತ್ರಿಸಿ, ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಪಾಡಿಕೊಳ್ಳುವಂತೆ ತಿಳಿ ಹೇಳಬೇಕು. ನಿಯಮ ಉಲ್ಲಂಘಿಸಿದರೆ ದಂಡ ತೆರಬೇಕಾಗುತ್ತದೆ ಎಂದು ಪಪಂ ಮುಖ್ಯಾಧಿಕಾರಿ ಮಲ್ಲೇಶ ಎಂ. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net