ಕರ್ನಾಟಕ, ಮಹಾರಾಷ್ಟ್ರ ಜಂಟಿ ಚೆಕ್‌ಪೋಸ್ಟ್ ಸ್ಥಾಪನೆ

30-33
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಎಡಿಜಿಪಿ ಅಲೋಕ್‌ಕುಮಾರ್ ಅಧ್ಯಕ್ಷತೆಯಲ್ಲಿ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆ ಜರುಗಿತು.
Published on

ನಿಪ್ಪಾಣಿ, ಬೆಳಗಾವಿ: ಗಡಿ ವಿವಾದ ಪ್ರಕರಣದ ಕುರಿತು ನಾಳೆ ಸುಪ್ರೀಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿಯಾಗಿ ಮೂರು ಕಡೆ ಚೆಕ್‌ಪೋಸ್ಟ್ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದು ಎಡಿಜಿಪಿ ಅಲೋಕ್‌ಕುಮಾರ್ ತಿಳಿಸಿದರು.

ನಿಪ್ಪಾಣಿ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಉಭಯ ರಾಜ್ಯಗಳ ಉನ್ನತಮಟ್ಟದ ಪೊಲೀಸ್ ಅಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಗಡಿ ವಿವಾದ ಕುರಿತು ಸುಪ್ರೀಂ ಕೋರ್ಟ್‌ನಿಂದ ಯಾವುದೇ ರೀತಿ ತೀರ್ಪು ಬಂದರೂ ಎರಡು ರಾಜ್ಯಗಳ ಗಡಿಭಾಗದಲ್ಲಿ ಯಾವುದೇ ರೀತಿಯಲ್ಲಿ ಗಲಾಟೆ ಆಗಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಬೆಳಗಾವಿ ಗಡಿಯಲ್ಲಿ 21 ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿ ಭದ್ರತೆಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಧಾರ್ಮಿಕ, ಕೌಟುಂಬಿಕ ಹಾಗೂ ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ನಮ್ಮ ಅಭ್ಯಂತರ ಇಲ್ಲ. ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುವ ಚಟುವಟಿಕೆ ನಡೆಸಲು ಆಗಮಿಸುವವರಿಗೆ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ. ಹಾಗಾಗಿ, ಗಡಿ ಭಾಗದ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಇಂದಿನಿಂದಲೇ ಗಸ್ತು ಆರಂಭಿಸಲು ಎಸ್‌ಪಿಗಳಿಗೆ ಸೂಚನೆ ನೀಡಲಾಗಿದೆ. ಅವಶ್ಯ ಬಿದ್ದರೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು. ಕಳೆದ ಮಹಾರಾಷ್ಟ್ರದಲ್ಲಿ ಕರ್ನಾಟಕದ ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಿ ಮಸಿ ಬಳಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ನಿತ್ಯ 450ಕ್ಕೂ ಅಧಿಕ ಬಸ್‌ಗಳು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 176ಕ್ಕೂ ಅಧಿಕ ಬಸ್‌ಗಳು ಸಂಚಾರ ನಡೆಸುತ್ತಿವೆ. ಹಾಗಾಗಿ, ಎರಡು ರಾಜ್ಯಗಳ ಸಾರಿಗೆ ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಅದಕ್ಕೆ ಗಡಿ ಭಾಗದ ಜನರು ಸಹಕಾರ ನೀಡಬೇಕು ಎಂದು ಹೇಳಿದರು.

ಮಹಾರಾಷ್ಟ್ರ ಕೊಲ್ಲಾಪುರ ಐಜಿಪಿ, ಎಸ್‌ಪಿ, ಸಾಂಗಲಿ, ಸಿಂಧೂರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಬೆಳಗಾವಿ ಐಜಿ, ಎಸ್‌ಪಿ, ಬೆಳಗಾವಿ ನಗರ ಪೊಲೀಸ್ ಆಯುಕ್ತರು ಸೇರಿ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net