ಕರ್ನಾಟಕ ರಾಜ್ಯೋತ್ಸವ ವಿಶೇಷವಾಗಿ ಆಚರಿಸಿ

DC DIVYAPRABHU
Published on

ಚಿತ್ರದುರ್ಗ: ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿಯ ನ. 1ರ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಿ ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ಮನವಿ ಮಾಡಿದ್ದಾರೆ.

ಸಾರ್ವಜನಿಕರು ತಮ್ಮ ಮನೆಗಳ ಮುಂದೆ ಕೆಂಪು-ಹಳದಿ ವರ್ಣದ ರಂಗೋಲಿ ಹಾಕಿ, ಗಾಳಿಪಟಗಳನ್ನು ಹಾರಿಸುವ ಮೂಲಕ ರಾಜ್ಯೋತ್ಸವದ ಸಂಭ್ರಮ ಹೆಚ್ಚಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.

ಎಲ್ಲರೂ ಸೇರಿ ಆಚರಿಸಬೇಕು ಎಂಬ ಸದುದ್ದೇಶದಿಂದ ಸರ್ಕಾರ ವೈವಿಧ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ನಿರ್ದೇಶಿಸಿದೆ. ಹೀಗಾಗಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯವನ್ನು ರಂಗೋಲಿಯೊಳಗೆ ಬರೆಯುವಂತೆ ವಿನಂತಿಸಿದ್ದಾರೆ.

ಅಂದು ಬೆಳಗ್ಗೆ 9ಕ್ಕೆ ರಾಜ್ಯದ ಎಲ್ಲ ಆಕಾಶವಾಣಿ ಕೇಂದ್ರಗಳಿಂದಲೂ ನಾಡಗೀತೆ ಪ್ರಸಾರವಾಗಲಿದೆ. ಆ ವೇಳೆ ಜಿಲ್ಲೆಯ ಪ್ರತಿಯೊಬ್ಬರೂ ಎದ್ದು ನಿಂತು ಗೌರವ ಸಲ್ಲಿಸಬೇಕು. ಸಂಜೆ 5ಕ್ಕೆ ನಗರ, ಪಟ್ಟಣ ಒಳಗೊಂಡು ಎಲ್ಲ ಗ್ರಾಮಗಳ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಣದ ಗಾಳಿಪಟಗಳನ್ನು ಬಾನೆತ್ತರಕ್ಕೆ ಹಾರಿ ಬಿಡುವ ಮೂಲಕ ಸಂಭ್ರಮದೊಂದಿಗೆ ಗಾಳಿಪಟ ಉತ್ಸವ ಆಚರಿಸಬೇಕು. ಸಂಜೆ 7ಕ್ಕೆ ಎಲ್ಲಾ ಮನೆಗಳ, ಕಚೇರಿಗಳ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net