

ಮೈಸೂರು: ಕರ್ನಾಟಕ ಸುವರ್ಣ ಮಹೋತ್ಸವ ಕಾರ್ಯಕ್ರಮದ ರೂಪರೇಷೆಯನ್ನು ಒಂದು ವಾರದಲ್ಲಿ ಪ್ರಕಟಿಸಲಾಗುವುದು ಎಂದು ಸಚಿವ ಶಿವರಾಜ ಎಸ್.ತಂಗಡಗಿ ತಿಳಿಸಿದರು.
‘ಸುವರ್ಣ ಕರ್ನಾಟಕ ಮಹೋತ್ಸವ’ ಆಚರಣೆ ಸಂಬಂಧ ಮೈಸೂರು ವಿಭಾಗೀಯ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು
ನ. 1ಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಸುವ ಬಗ್ಗೆ ಆಯವ್ಯಯದಲ್ಲಿ ಈಗಾಗಲೇ ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗವಾರು ಸಭೆ ಆಯೋಜನೆ ನಡೆಸಿ ಸಲಹೆ ಪಡೆದುಕೊಳ್ಳಲಾಗಿದೆ ಎಂದರು.
ಎಲ್ಲ ಸಲಹೆ-ಸೂಚನೆಯನ್ನು ಕ್ರೋಡೀಕರಣಗೊಳಿಸಿ ವರದಿ ನೀಡಲು ಸಮಿತಿ ರಚನೆ ಮಾಡಲಾಗಿದೆ. ಸೆ.13 ಅಥವಾ 14ರಂದು ಸಭೆ ನಡೆಸಲಾಗುವುದು. ಅಂತಿಮವಾಗಿ ಸಿಎಂ ಅವರೊಂದಿಗೆ ಸಮಾಲೋಚನೆ ನಡೆಸಿ ಸಮಾರಂಭದ ರೂಪುರೇಷೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.
ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಪರಂಪರೆ, ಕನ್ನಡದ ಇತಿಹಾಸ, ಸಂಸ್ಕೃತಿ ಬಿಂಬಿಸುವ ಹಿನ್ನೆಲೆಯಲ್ಲಿ ಕನ್ನಡರಥ ರಾಜ್ಯವಿಡೀ ಸಂಚಾರ ಮಾಡುವುದು, 31 ಜಿಲ್ಲೆಗಳಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪ್ರತಿಮೆ ನಿರ್ಮಾಣ, ಕುವೆಂಪು ಅವರ ಸಾಹಿತ್ಯವನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯಕ್ರಮ ಆಯೋಜನೆ, ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಭಾಗಿಯಾಗಿದ್ದ ಗಣ್ಯರಿಗೆ ಸನ್ಮಾನ, ಗಡಿನಾಡಿನಲ್ಲಿ ಕನ್ನಡ ಬಿತ್ತುವುದು ಸೇರಿದಂತೆ ಹಲವು ಸಲಹೆಗಳು ಬಂದಿವೆ. ಇವುಗಳ ಆಧಾರದ ಮೇಲೆ ಕಾರ್ಯಕ್ರಮದ ರೂಪುರೇಷೆಯನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಡಿ.ದೇವರಾಜ ಅರಸು ಅವರ ಅವಧಿಯಲ್ಲಿ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಗಿತ್ತು. ಇದೀಗ ಮೈಸೂರು ಭಾಗದವರೇ ಆದ ಸಿದ್ದರಾಮಯ್ಯ ಅವರ ಅವಧಿಯಲ್ಲಿ 50ರ ಸಂಭ್ರಮದಲ್ಲಿರುವುದು ಹೆಮ್ಮೆಯ ಸಂಗತಿ. ವರ್ಷವಿಡೀ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ 247 ಕೋಟಿ ರೂ. ಅನುದಾನ ನೀಡಿದ್ದಾರೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.