ಕಲಬುರಗಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿ

11112022 koppal FOUZIA TARNUM zp ceo
Published on

ಕಲಬುರಗಿ: ಲೋಕಸಭಾ ಮೀಸಲು ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಜೂ.೪ರಂದು ಗುಲ್ಬರ್ಗ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ನಡೆಯಲಿದೆ. ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಸಲು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಜೂ.೪ರ ಬೆಳಗ್ಗೆ ೬ರಿಂದ ಜೂ.೫ರ ಬೆಳಗ್ಗೆ ೬ರವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಜಿಲ್ಲೆದ್ಯಂತ ಮೆರವಣಿಗೆ, ಸಭೆ- ಸಮಾರಂಭ ಅಥವಾ ೫ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ಓಡಾಡುವುದು, ವಿಜಯೋತ್ಸವ ಹಾಗೂ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಿದೆ. ಶಸ್ತç, ಬಡಿಗೆ, ಬರ್ಚಿ, ಖಡ್ಗ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಕಲ್ಲು, ಪಟಾಕಿ ಹಚ್ಚುವುದು, ಸ್ಪೋಟಕ ವಸ್ತು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತç ತೆಗೆದುಕೊಂಡು ಹೋಗುವುದು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ ಎಂದಿದ್ದಾರೆ.
ಶವ ಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಮೆರವಣಿಗೆಗೆ ಈ ಪ್ರತಿಬಂಧಕಾಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮ ಪಾಲಿಸಬೇಕು. ಮತ ಎಣಿಕೆ ಕೇಂದ್ರದ ಸುತ್ತ ೨೦೦ ಮೀಟರ್ ಅಂತರದಲ್ಲಿ ಮೊಬೈಲ್, ಕಾರ್ಡ್ಲೆಸ್ ಫೋನ್ ಅಥವಾ ಇತರೆ ಎಲೆಕ್ಟಾçನಿಕ್ಸ್ ಉಪಕರಣ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಈ ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net