

ವಿರಾಜಪೇಟೆ: ಕ್ರೀಡೆಗಳಿಂದ ಉತ್ತಮ ಆರೋಗ್ಯ ಪಡೆದುಕೊಳ್ಳಲು ಸಾಧ್ಯ. ಕಲಿಕೆಯೊಂದಿಗೆ ಕ್ರೀಡೆಗೂ ಗೌರವ ನೀಡಿ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಮತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಹೇಳಿದರು.
ಕರ್ನಾಟಕ ಸರ್ಕಾರ, ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವಿರಾಜಪೇಟೆ ತಾಲೂಕು ಮತ್ತು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ 2025-26ನೇ ಸಾಲಿನ ವಿರಾಜಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಧ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕೊಡಗು ಜಿಲ್ಲೆ ಕ್ರೀಡೆಗಳ ತವರೂರು. ಜಿಲ್ಲೆಯ ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಮಟ್ಟದಿಂದ ಬಂದ ವಿದ್ಯಾರ್ಥಿಗಳು ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆಗೈದು ಉನ್ನತ ಪದವಿಗಳನ್ನು ಅಲಂಕರಿಸಿದ್ದಾರೆ. ಕ್ರೀಡೆಗಳು ಸೋಲು ಮತ್ತು ಗೆಲುವುನ್ನು ಕಲಿಸುತ್ತದೆ. ಇದುವೇ ಜೀವನ ಪಾಠ ಎಂಬುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.
ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಥಾಪಕ ಮಾದಂಡ ಎಸ್. ಪೂವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುರಸಭೆಯ ಅಧ್ಯಕ್ಷ ಎಂ. ದೇಚಮ್ಮ ಕಾಳಪ್ಪ ಗೌರವ ವಂದನೆಯನ್ನು ಸ್ವೀಕರಿಸಿದರು. ಪುರಸಭೆಯ ಉಪಾಧ್ಯಕ್ಷ ಫಾಸಿಯ ತಬ್ಸುಂ, ಸ್ಥಾಯಿ ಸಮಿತಿಯ ಅಧ್ಯಕ್ಷ ಅಬ್ದುಲ್ ಜಲೀಲ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎ. ಪ್ರವೀಣ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಡಾ. ಸೋಮಯ್ಯ, ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಸುಶ್ಮಾ ತಿಮ್ಮಯ್ಯ, ಮುಖ್ಯ ಶಿಕ್ಷಕರು, ವಿವಿಧ ಶಾಲೆಯ ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ವಿರಾಜಪೇಟೆ ವಲಯ, ಪೊನ್ನಂಪೇಟೆ ವಲಯ, ಅಮ್ಮತ್ತಿ ವಲಯ, ಬಾಳಲೆ ವಲಯ, ಹುದಿಕೇರಿ ವಲಯ ಮತ್ತು ಶ್ರೀಮಂಗಲ ವಲಯದ ವಿವಿಧ ಶಾಲೆಗಳ ವಿಧ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.