

ಬಾಗಲಕೋಟೆ: ನಮ್ಮ ನಾಡಿನ ಸಂಸ್ಕೃತಿ, ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಲೆಗಳ ಪುನರ್ಜಿವನಗೊಳಿಸಲು ತರಬೇತಿ ಶಿಬಿರಗಳನ್ನು ಸರ್ಕಾರ ಆಯೋಜಿಸುತ್ತಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೂಲ ಸಂಸ್ಕೃತಿ-ಕನ್ನಡ ಸಂಸ್ಕೃತಿಯಡಿ ವಿಶಿಷ್ಟ ಕಲೆಗಳ ತರಬೇತಿ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಆಧುನಿಕ ಯುಗದಲ್ಲಿ ಹಳೆಯ ಕಲೆಗಳು ನಶಿಸಿ ಹೋಗುತ್ತಿವೆ. ಅವಗಳಿಗೆ ಜೀವ ತುಂಬುವ ಮೂಲಕ ಅವುಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತರಬೇತಿ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಕಲಾ ಪ್ರಕಾರದ ತಂಡಗಳಿಗೆ ಹಾಜರಾತಿ ಪುಸ್ತಕಗಳನ್ನು ಶಾಸಕ ವೀರಣ್ಣ ಚರಂತಿಮಠ ಅವರು ವಿತರಿಸಿದರು. ಕಾರ್ಯಕ್ರಮದಲ್ಲಿ ವಿಶಿಷ್ಟ ಕಲೆಗಳ ತರಬೇತಿ ಶಿಬಿರದ ಜಿಲ್ಲಾ ಸಂಚಾಲಕರಾದ ಯಲ್ಲಪ್ಪ ನಾರಾಯಣಿ, ಸತೀಶ ಮಾದರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.