ಕಲ್ಲುಗಣಿಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಿ, ಸಚಿವ ಹಾಲಪ್ಪ ಆಚಾರ್ ಸೂಚನೆ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ

fa9458dc-fc72-4502-b022-c684ef54f498
Published on

ಬೆಂಗಳೂರು ಗ್ರಾಮಾಂತರ: ಕಲ್ಲು ಗಣಿ ಪ್ರದೇಶದಲ್ಲಿ ಕಡ್ಡಾಯವಾಗಿ ಸುರಕ್ಷತಾ ಕ್ರಮ ಅನುಸರಿಸಬೇಕು, ಲೋಪ ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್ ಎಚ್ಚರಿಕೆ ನೀಡಿದರು.

ದೇವನಹಳ್ಳಿ ತಾಲೂಕು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಗಣಿಗಾರಿಕೆ ಸಂಬಂಧಿಸಿದಂತೆ ಕರೆದಿದ್ದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಗಣಿಗಾರಿಕೆ ಪ್ರದೇಶದ ಸುತ್ತಲೂ ಸುರಕ್ಷಿತ ತಡೆಗೋಡೆ ನಿರ್ಮಿಸಬೇಕು ಎಂದು ಪುನರುಚ್ಚರಿಸಿದರು.

ಕಲ್ಲು ಗಣಿ ಗುತ್ತಿಗೆಗಳು ಕ್ಲಸ್ಟರ್ ರೂಪದಲ್ಲಿರುವುದರಿಂದ ಸಮರ್ಪಕವಾಗಿ ೆನ್ಸಿಂಗ್ ಹಾಗೂ ವೇ ಬ್ರಿಡ್ಜ್‌ಗಳನ್ನು ನಿರ್ಮಿಸಬೇಕು. ಇದಕ್ಕೆ ಇಲಾಕೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಹಾಳಾಗದಂತೆ ಎಚ್ಚರಿಕೆ ವಹಿಸಿ: ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ನಿಯಮಾನುಸಾರ ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಗಣಿ ಪ್ರದೇಶದ ಆಸುಪಾಸಿನವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಉಪಖನಿಜ ಸಾಗಣೆ ಮಾಡುವ ವಾಹನಗಳಿಂದ ರಸ್ತೆಗಳು ಹಾಳಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಕಲ್ಲು ಗಣಿ ಪ್ರದೇಶದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಗುತ್ತಿಗೆದಾರರು ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನೀರಿನ ಸಮಸ್ಯೆ ಪರಿಹಾರಕ್ಕೆ ಮನವಿ: ಅಕ್ರಮ ಗಣಿಗಾರಿಕೆ ತಡೆಗಟ್ಟಬೇಕು ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲೆಯ ರೈತರು ಸಚಿವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚಿಸಲಾಗಿದೆ. ಕುಡಿಯುವ ನೀರಿನ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ತೈಲಗೆರೆ ಭೇಟಿ: ದೇವನಹಳ್ಳಿ ತಾಲೂಕಿನ ತೈಲಗೆರೆಯ ಸರ್ವೇ ನಂ.110 ರಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಸ್ಥಳ ಪರಿಶೀಲನೆ ನಡೆಸಿ ಗಣಿಗಾರಿಕೆ ಸಂಬಂಧಿಸಿದಂತೆ ದಾಖಲೆ ಪರಿಶೀಲಿಸಿದರು. ಈ ವೇಳೆ ಸ್ಥಳೀಯರು ಅಕ್ರಮ ಗಣಿಗಾರಿಕೆ, ಸ್ಫೋಟದ ತೀವ್ರತೆ, ಪರಿಸರ ನಾಶ ಮತ್ತಿತರ ಸಮಸ್ಯೆ ಬಗ್ಗೆ ದೂರು ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇಲ್ಲಿನ ವಸ್ತುಸ್ಥಿತಿಯ ಬಗ್ಗೆ ಸಂಪೂರ್ಣ ವರದಿ ನೀಡಿ, ಲೋಪಕಂಡುಬಂದರೆ ಕಾನೂನು ಕ್ರಮ ಜರುಗಿಸಿ ಎಂದು ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net