ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

7blrp1..
ಬೇಲೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ನಿಶಾಂತ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟಿಸಿದರು. ಗ್ರಾನೈಟ್ ರಾಜಶೇಖರ್, ವೈ.ಎನ್.ಕೃಷ್ಣೇಗೌಡ, ಚಿಕ್ಕಬ್ಯಾಡಿಗೆರೆ ಮಂಜುನಾಥ್, ವಿಜಯಕುಮಾರ್ ಇತರರಿದ್ದರು.
Published on

ಬೇಲೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ನಿಶಾಂತ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಹಾಗೂ ತಕ್ಷಣವೇ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಆಗ್ರಹಿಸಿ ಜಿಪಂ ಮಾಜಿ ಸದಸ್ಯ ವೈ.ಎನ್.ಕೃಷ್ಣೇಗೌಡ, ಮುಖಂಡ ಗ್ರಾನೈಟ್ ರಾಜಶೇಖರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟಿಸಿದರು.
ಪಟ್ಟಣದ ಖಾಸಗಿ ಹೋಟೆಲ್ ಸಮೀಪದಿಂದ ಮಾಜಿ ಸಚಿವ ಬಿ.ಶಿವರಾಂ ಹಠಾವೋ ಕಾಂಗ್ರೆಸ್ ಬಚಾವೋ ಎಂದು ಘೋಷಣೆಗಳನ್ನು ಕೂಗಿ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದರು.
ವೈ.ಎನ್.ಕೃಷ್ಣೇಗೌಡ ಮಾತನಾಡಿ, ಕಳೆದ ಡಿ.4 ರಂದು ತಾಲೂಕಿನ ಹಳೇಬೀಡಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ನಮ್ಮ ಪಕ್ಷದ ಮುಖಂಡ ರಾಯಪುರ ಶಿವಣ್ಣ ಅವರು, ಬಿ.ಶಿವರಾಂ ಅವರ ವಿರುದ್ಧ ಮಾತನಾಡಿದ್ದಾರೆಂಬ ಕಾರಣಕ್ಕೆ ಬೇಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ನಿಶಾಂತ್, ಶಿವಣ್ಣ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ, ಕೂಡಲೇ ಬ್ಲಾಕ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಚಾಟಿಸಬೇಕು. ಇವರಿಗೆ ಕುಮ್ಮಕ್ಕು ನೀಡುತ್ತಿರುವ ಮಾಜಿ ಸಚಿವ ಬಿ.ಶಿವರಾಂ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೆಪಿಸಿಸಿ ಕಚೇರಿ ಮುಂಭಾಗ ಕ್ಷೇತ್ರದ ಕಾರ್ಯಕರ್ತರೊಂದಿಗೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾನೈಟ್ ರಾಜಶೇಖರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಾನು ಮತ್ತು ವೈ.ಎನ್.ಕೃಷ್ಣೇಗೌಡರು ಒಟ್ಟಾಗಿ ಪಕ್ಷದ ಸಂಘಟನೆಗೆ ಮುಂದಾಗಿದ್ದೇವೆ. ಇದನ್ನು ಸಹಿಸದೆ ಮಾಜಿ ಸಚಿವ ಬಿ.ಶಿವರಾಂ ಬಣದವರು ನಮ್ಮವರ ವಿರುದ್ಧ ದಬ್ಬಾಳಿಕೆ, ದೌರ್ಜನ್ಯ ಎಸಗುತಿದ್ದಾರೆ. ಇಂತವರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕಿದೆ. ಎಲ್ಲರನ್ನು ಒಟ್ಟಿಗೆ ಕರೆದೊಯ್ಯಬೇಕಾದ ಅಧ್ಯಕ್ಷರೇ ಯಾರದೋ ಮಾತು ಕೇಳಿಕೊಂಡು ಕಾರ್ಯಕರ್ತರ ಮೇಲೆ ಹಲ್ಲೆ ದೌರ್ಜನ್ಯ ಎಸಗಿ ಕ್ಷೇತ್ರದಲ್ಲಿ ಪಕ್ಷದ ಹೆಸರು ಹಾಳು ಮಾಡುತಿದ್ದಾರೆ. ಈ ಬಗ್ಗೆ ಕೆಪಿಸಿಸಿ ಮುಖಂಡರು ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ತಾಪಂ ಮಾಜಿ ಸದಸ್ಯರಾದ ಚಿಕ್ಕಬ್ಯಾಡಿಗೆರೆ ಮಂಜುನಾಥ್, ವಿಜಯಕುಮಾರ್, ಪುರಸಭೆ ಮಾಜಿ ಸದಸ್ಯರಾದ ಜುಬೇರ್ ಅಹಮದ್, ಅರುಣ್‌ಕುಮಾರ್, ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಬಾಬು, ಮುಖಂಡರಾದ ಜೀಪ್ ಚಂದ್ರು, ಭೂಮೇಶ್, ಧನ್‌ಪಾಲ್, ಎಂ.ಜಿ.ವೆಂಕಟೇಶ್, ಆಸೀಫ್ ಸೇರಿದಂತೆ ಇತರರು ಇದ್ದರು.
ಬೇಲೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ನಿಶಾಂತ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟಿಸಿದರು. ಗ್ರಾನೈಟ್ ರಾಜಶೇಖರ್, ವೈ.ಎನ್.ಕೃಷ್ಣೇಗೌಡ, ಚಿಕ್ಕಬ್ಯಾಡಿಗೆರೆ ಮಂಜುನಾಥ್, ವಿಜಯಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net