ಮೈಸೂರು: ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ. ಸಿದ್ದರಾಮಯ್ಯ ವಿರುದ್ಧ ವರುಣ ಇಲ್ಲವೇ ಬೇರೆಡೆ ನಿಲ್ಲುವಂತೆ ತಿಳಿಸಿದರೂ ಅದನ್ನು ಪಾಲಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಎಲ್ಲ ಸವಾಲುಗಳನ್ನು ಎದುರಿಸುತ್ತೇನೆ. ವರುಣ ಮಾತ್ರವಲ್ಲ, ಎಲ್ಲ ಕ್ಷೇತ್ರಗಳಲ್ಲಿಯೂ ಸಂಘಟನೆ ಮಾಡುತ್ತಿದ್ದೇನೆ ಎಂದು ಅವರು ನಗರದಲ್ಲಿ ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯಲು ಹೋರಾಟ ಮಾಡುತ್ತಿದ್ದೇವೆ. ಹೀಗಾಗಿ ಇಲ್ಲಿಯೂ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುತ್ತಿದ್ದೇವೆ. ಎಲ್ಲ ಕ್ಷೇತ್ರಗಳಲ್ಲಿಯೂ ಓಡಾಟ ಮಾಡಲಾಗುತ್ತಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.
ಪ್ರಧಾನಿ ನರೇಂದ್ರಮೋದಿ ಅವರು ಬರೀ ಅಲೆ ಅಲ್ಲ, ಅವರೊಂದು ಸುನಾಮಿ ಇದ್ದಂತೆ. ಇದು ಕಾಂಗ್ರೆಸ್‌ನವರಿಗೆ ಇನ್ನೂ ಅರ್ಥವಾಗಿಲ್ಲ. ಹೀಗಾಗಿ ಗುಜರಾತ್ ಫಲಿತಾಂಶದ ಪರಿಣಾಮ ಕರ್ನಾಟಕದ ಮೇಲೆ ಆಗಲ್ಲ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಚುನಾವಣೆ ಬಳಿಕ ಅದಕ್ಕೆ ಉತ್ತರ ದೊರೆಯುತ್ತದೆ ಎಂದು ಹೇಳಿದರು.
ಅಭಿಮಾನಿಗಳಿಂದ ಅದ್ದೂರಿ ಸ್ವಾಗತ:
ನಗರದ ಡಾ.ಶ್ರೀಶಿವರಾತ್ರಿ ರಾಜೇಂದ್ರ ವೃತ್ತದ ಬಳಿ ಇರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ವಿಜಯೇಂದ್ರ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ ಅಭಿಮಾನಿಗಳು, ಪಟಾಕಿ ಸಿಡಿಸಿ, ರಾಜಾಹುಲಿಗೆ ಜೈ ಎಂದು ಘೋಷಣೆ ಹಾಕಿದರಲ್ಲದೆ, ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಘೋಷಣೆ ಕೂಗಿದರು.