

ಬೆಳಗಾವಿ: ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಲು ಕಾಂಗ್ರೆಸ್ ಚುನಾವಣಾ ನೀತಿ ತಜ್ಞ ಪ್ರಶಾಂತ ಕಿಶೋರ ಅವರನ್ನು ಬಳಸಿಕೊಳ್ಳಬೇಕು. ಜತೆಗೆ ಕಾಂಗ್ರೆಸ್ ಪಕ್ಷವನ್ನು ಪುನಶ್ಚೇತನಗೊಳಿಸುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ ಎಂದು ತಿಳಿದುಕೊಳ್ಳಬೇಕು. ಮತ್ತೆ ಎದ್ದು ಅಧಿಕಾರಕ್ಕೇರುವ ಶಕ್ತಿ ಇದೆ. ಹಾಗಾಗಿ ಈಗಿನಿಂದಲೇ ಕಾಂಗ್ರೆಸ್ ಸಂಘಟನೆ ಕೆಲಸ ಆರಂಭಿಸಬೇಕು. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಪ್ರಶಾಂತ ಕಿಶೋರ ಅವರನ್ನು ಬಳಸಿಕೊಳ್ಳುವುದು ಸೇರಿ ವಿವಿಧ ವಿಷಯಗಳ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದೇನೆ ಎಂದರು.
ಪಂಚರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ನಂಬಲು ಸಾಧ್ಯವಾಗುತ್ತಿಲ್ಲ. ಆಡಳಿತ ವಿರೋಧಿ ಅಲೆಯಿದ್ದರೂ ಬಿಜೆಪಿ ಗೆಲುವು ಸಾಧಿಸಿದೆ. ಆದರೆ, ಕರ್ನಾಟಕದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅದಕ್ಕೆ ಕರ್ನಾಟಕದ ಜನತೆ ಅವಕಾಶ ನೀಡುವುದಿಲ್ಲ.ಈಗಾಗಲೇ ಪಕ್ಷದಲ್ಲಿ ಚುನಾವಣೆ ಸಿದ್ಧತೆ ಆರಂಭಗೊಂಡಿದ್ದು, 2024 ಲೋಕಸಭೆ ಮತ್ತು 2023 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಆರ್ಥಿಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದರಿಂದ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನ ಸಾಮಾನ್ಯರು ಬಿಜೆಪಿ ವಿರೋಧಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಜನರ ಧ್ವನಿಯಾಗಿ ಹೋರಾಟ ನಡೆಸುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಬಿಜೆಪಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್, ಪ್ರದೀಪಕುಮಾರ, ಅರವಿಂದ ದಳವಾಯಿ ಇತರರಿದ್ದರು.
ಖಂಡನೆ: ಹಳೆಯ ಹುಬ್ಬಳ್ಳಿ ಗಲಾಟೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸುತ್ತಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ದೂರಿದರು.