

ಹುಬ್ಬಳ್ಳಿ : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಸಮೀಕ್ಷೆಯಿಂದ ಬಹಿರಂಗಗೊಂಡಿದ್ದು, ಅಧಿಕಾರಕ್ಕೆ ಬರುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಜನರು ಬೇಸತ್ತಿದ್ದಾರೆ. ಆ ಪಕ್ಷಕ್ಕೆ ಕೇವಲ 65 ಸೀಟು ಬರುವುದಾಗಿ ಸಮೀಕ್ಷೆ ತಿಳಿಸಿದೆ ಎಂದರು.
ರಾಹುಲ್ ಗಾಂಧಿ ನಡೆಸಿದ ಭಾರತ ಜೋಡೋ ಯಾತ್ರೆಯಿಂದ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಕಾಂಗ್ರೆಸ್ ವರ್ಚಸ್ಸು ಹೆಚ್ಚಿದೆ. ಕಾಂಗ್ರೆಸ್ನಿಂದ ಮಾತ್ರ ಒಳ್ಳೆಯ ಆಡಳಿತ ನೀಡಲು ಸಾಧ್ಯ ಎಂಬುದನ್ನು ಜನರು ಅರಿತಿದ್ದಾರೆ ಎಂದು ಹೇಳಿದರು.
ಬಿಜೆಪಿ ತನ್ನ ಕಾರ್ಯಕರ್ತರಿಗೆ ಇವಿಎಂ ಹ್ಯಾಕ್ ಮಾಡುವುದನ್ನು, ಮತದಾರರ ಪಟ್ಟಿಯಿಂದ ಮತದಾರರ ಹೆಸರು ರದ್ದುಗೊಳಿಸುವುದನ್ನು ಕಲಿಸುತ್ತಿದೆ ಎಂದು ದೂರಿದರು.
ರಾಜ್ಯದ ವಿವಿಧ ವಿಧಾನಸಭೆ ಕ್ಷೇತ್ರಗಳಿಂದ ಟಿಕೆಟ್ ಬಯಸಿ ಇದುವರೆಗೆ 1 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ಕಾಂಗ್ರೆಸ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ನೀಡುವ ಅಂತಿಮ ದಿನಾಂಕ ಮುಂದೂಡಿರುವುದರಿಂದ ಇನ್ನಷ್ಟು ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಟಿಪು್ಪ ಪ್ರತಿಮೆ ಸ್ಥಾಪಿಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.