

ಮಂಡ್ಯ: ರಾಜ್ಯಬಜೆಟ್‌ನಲ್ಲಿ ಎಸ್ಸಿ, ಎಸ್ಟಿ ಮತ್ತು ಟಿಎಸ್ಪಿ ಅನುದಾನ ಮೀಸಲಿರಿಸಲು ಕಾಂತರಾಜ್ ಆಯೋಗದ ಜಾತಿ ಜನಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸರ್‌ಎಂವಿ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು, ಬಳಿಕ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ತೆರಳಿದರು. ನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ರವಾನಿಸಿದರು.
ಬಜೆಟ್‌ಗೆ ಮೊದಲು ಕಾಂತರಾಜ್ ಆಯೋಗದ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಬೇಕು. ಪರಿಶಿಷ್ಟ ಜಾತಿ ಮೀಸಲಾತಿ ವರ್ಗಿಕರಣದ ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೊಳಿಸಲು ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು. ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ನೇರ ಸಾಲ ನೀಡಲು ತಲಾ 500 ಕೋಟಿ ರೂ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಕ್ಕೆ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕು. ರಾಜ್ಯದ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು. ರಾಜ್ಯ ಬೌದ್ಧ ಪ್ರಾಧಿಕಾರ ಸ್ಥಾಪನೆ ಬಗ್ಗೆ ಬಜೆಟ್‌ನಲ್ಲಿ ಘೋಷಿಸಬೇಕು ಎಂದು ಆಗ್ರಹಿಸಿದರು.
ಅಂತೆಯೇ ಜಿಲ್ಲೆಗೆ ಸಂಬಂಧಿಸಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ಮಾಡಬೇಕು. ಜಿಲ್ಲಾ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು. ಬರಗಾಲ ನಿರ್ವಹಣೆಗೆ ಕೆರೆ ಹೂಳೆತ್ತಿಸಿ ಕೆರೆ ಸುತ್ತಲೂ ಅರಣ್ಯ ಗಿಡಗಳನ್ನು ನೆಟ್ಟು ಫೋಷಣೆ ಮಾಡಲು ಯೋಜನೆ ನೀಡಬೇಕು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ, ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್, ಉಪಾಧ್ಯಕ್ಷ ಆನಂದ್, ಸಂಘಟನಾ ಕಾರ್ಯದರ್ಶಿ ಸಿದ್ದಯ್ಯ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಇತರರಿದ್ದರು.