ಕಾಡಂಚಿನ ಗ್ರಾಮಗಳಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸಿ

Published on

ಹನೂರು: ಪಟ್ಟಣದ ಅರಣ್ಯ ಇಲಾಖೆಯ ಕಚೇರಿಯ ಮುಂಭಾಗ ಬುಧವಾರ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ನೆರೆದಿದ್ದ ನೂರಾರು ರೈತರು ಅರಣ್ಯಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಮಿಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವಿಗೆ ಡಿಸಿಎಫ್, ಎಸಿಎಫ್ ಹಾಗೂ ಡಿಎಫ್‌ಒ ಅವರೇ ಕಾರಣ. ಆದ್ದರಿಂದ ಕೂಡಲೇ ಅವರನ್ನು ಅಮಾನತುಗೊಳಿಸಬೇಕು. ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗೆ ಸಂಬಳ ನೀಡದ ಪರಿಣಾಮ ಸಿಬ್ಬಂದಿ ಸಂಬಳ ನೀಡುವಂತೆ ಒತ್ತಾಯಿಸಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದ ಪ್ರತಿಭಟನೆ ನಡೆಸಬೇಕಾದ ಸ್ಥಿತಿ ಬಂದಿದೆ. ಇದರಿಂದ ಸಿಬ್ಬಂದಿ ಗಸ್ತು ತಿರುಗಲು ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಹುಲಿಗಳು ಬಲಿಯಾಗಿವೆ. ಈ ಹಿಂದೆ ಜಾನುವಾರುಗಳು ಅರಣ್ಯ ಪ್ರದೇಶದಲ್ಲಿ ಮೇಯುತ್ತಿದ್ದವು. ಕಾಡು ಪ್ರಾಣಿಗಳು ವಾಸಿಸುತ್ತಿದ್ದವು. ಇದರಿಂದ ಕಾಡು ಸಮೃದ್ಧಿಯಿಂದ ಕೂಡಿತ್ತು. ಜಾನುವಾರುಗಳು ಮೇವಿಗೆ ಅರಣ್ಯ ಇಲಾಖೆಯಿಂದ ಯಾವುದೇ ರೀತಿಯಲ್ಲೂ ಸಮಸ್ಯೆಯಾಗಬಾರದು. ಕಾಡು ಪ್ರಾಣಿಗಳು ಜಮೀನಿಗೆ ಲಗ್ಗೆ ಇಟ್ಟು ಫಲಸನ್ನು ನಾಶಪಡಿಸುತ್ತಿವೆ. ಇದರಿಂದ ರೈತರು ನಷ್ಟವನ್ನು ಅನುಭವಿಸುವಂತಾಗಿದೆ. ಆದ್ದರಿಂದ ಕಾಡಂಚಿನ ಗ್ರಾಮಗಳಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸಬೇಕು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕಾಗಮಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸ್ಥಳಕ್ಕಾಗಮಿಸಿದ ಡಿಸಿಎಫ್ ಶ್ರೀಪತಿ, ಸುರೇಂದ್ರ, ಎಸಿಎಫ್ ಮನೋಹರ್ ಸ್ವಪ್ನಿಲ್ ಅವರು ಸಮಸ್ಯೆಯನ್ನು ಆಲಿಸಿದರು. ಬಳಿಕ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ, ಪದಾಧಿಕಾರಿಗಳಾದ ರಾಜು, ಮಾದಪ್ಪ, ಶ್ರೀನಿವಾಸ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net