

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಹೆಚ್ಚಿರುವ ಕಾಡಾನೆ ಉಪಟಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಮೂಲಕ ಸ್ಥಳೀಯರಿಗೆ ನೆಮದಿ ಬದುಕು ಕಟ್ಟಿಕೊಡಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯಿಂದ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಸಂಘಟನೆ ಜಿಲ್ಲಾಧ್ಯಕ್ಷ ಸೋಮೇಶ್ ಅವರು ಮಾತನಾಡಿ, ಕಳೆದ ಇಪ್ಪತ್ತು ವರ್ಷಗಳಿಂದ ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದೆ. ಆಹಾರ ಅರಸಿ ಬರುವ ಕಾಡಾನೆಗಳು ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿವೆ. ರೈತರು ಕೆಲಸಕ್ಕಾಗಿ ಜಮೀನಿಗೆ ಹೋಗಲು ಪರದಾಡುವಂತಾಗಿದೆ. ಆನೆ ಕಾಲ್ತುಳಿತದಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ನಿರ್ಭಿತಿಯಿಂದ ಶಾಲೆಗಳಿಗೆ ಹೋಗಲು ಹೆದರುವಂತಾಗಿದೆ. ಕಾಡಾನೆಗಳ ಸಂತತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸ್ಥಳೀಯರ ಆತಂಕ ಹೆಚ್ಚುವಂತೆ ಮಾಡಿದೆ ಎಂದರು.
ಕಾಡಾನೆಗಳಿಂದ ಅನಾಹುತ ಸಂಭವಿಸಿದಾಗ ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಅರಣ್ಯ ಇಲಾಖೆ ಅಧಿಕಾರಿಗಳು ಒಂದು ಅಥವಾ ಎರಡು ಆನೆ ಸೆರೆ ಹಿಡಿದು ಸುಮನಾಗುತ್ತಾರೆ. ನಂತರ ಆ ಬಗ್ಗೆ ಯೋಚನೆ ಮಾಡುವುದಿಲ್ಲ. ಸರ್ಕಾರದ ನಿರ್ಲಕ್ಷ್ಯವೇ ಅವಾಂತರಕ್ಕೆ ಕಾರಣವಾಗಿದ್ದು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಜಯಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕ ಉಮೇಶ್, ಜಿಲ್ಲಾ ಕಾರ್ಯಾಧ್ಯಕ್ಷ ಸಂಗಮ್, ಬೇಲೂರು ತಾಲೂಕು ಅಧ್ಯಕ್ಷ ಎಸ್.ಎಂ.ರಾಜು, ಆಲೂರು ಘಟಕ ಅಧ್ಯಕ್ಷ ಸಂದೇಶ್, ಸಕಲೇಶಪುರ ಘಟಕ ಅಧ್ಯಕ್ಷ ಚೇತನ್ ಶೆಟ್ಟಿ, ಅಬ್ದುಲ್ ರಜಾಕ್ ಇತರರು ಇದ್ದರು.