

ಸೋಮವಾರಪೇಟೆ: ತಾಲೂಕಿನಲ್ಲಿ ಅತಿವೃಷ್ಟಿಯಿಂದ ಫಸಲು ಹಾನಿಯಾಗಿರುವ ಪ್ರದೇಶಗಳಿಗೆ ಬಿಜೆಪಿ ಪ್ರಮುಖರ ನಿಯೋಗ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಅವರ ನೇತೃತ್ವದಲ್ಲಿ ತಾಲೂಕಿನ ತೋಳೂರುಶೆಟ್ಟಳ್ಳಿ, ಶಾಂತಳ್ಳಿ, ಬೆಟ್ಟದಳ್ಳಿ, ಗರ್ವಾಲೆ ಗ್ರಾಮ ಪಂಚಾಯಿತಿಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಫಸಲು ನಷ್ಟದ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.
ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಈ ಹಿಂದೆ ಬಿಜೆಪಿ ಸರ್ಕಾರ ಇದ್ದ ಸಂದರ್ಭ ಒಟ್ಟು 208 ಕೋಟಿ ರೂ.ಹಣವನ್ನು ಕೊಡಗಿನ 55 ಸಾವಿರ ಬೆಳೆಗಾರರಿಗೆ ಪರಿಹಾರವಾಗಿ ನೀಡಿದ್ದೇವೆ. ಈಗಿನ ಸರ್ಕಾರ ಕಾಫಿ ಬೆಳೆಗಾರರ ರಕ್ಷಣೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.
ಬಿಜೆಪಿ ನಿಯೋಗದಿಂದ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಿ ವರದಿ ತಯಾರಿಸಲಾಗುವುದು. ಇದನ್ನು ಸಂಸದರ ಮೂಲಕ ಕೇಂದ್ರ ಸರ್ಕಾರ, ವಿಧಾನ ಸಭೆಯ ವಿರೋಧ ಪಕ್ಷದ ನಾಯಕರು, ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಪಕ್ಷದ ವತಿಯಿಂದ ರೈತರ ಪರವಾಗಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ವಾಡಿಕೆಗಿಂತ ದುಪ್ಪಟ್ಟು ಪ್ರಮಾಣದಲ್ಲಿ ಮಳೆಯಾಗಿ, ಬೆಳೆಗಳು ನಾಶಗೊಂಡಿವೆ. ಜಿಲ್ಲಾಡಳಿತ, ಉಸ್ತುವಾರಿ ಸಚಿವರು, ಶಾಸಕರು ಪರಿಹಾರ ಸಂಬಂಧ ಯಾವುದೇ ಸರ್ವೇ ಮಾಡಿಸಿಲ್ಲ ಎಂದು ಆರೋಪಿಸಿದರು.
ಈಗಾಗಲೇ ಕಾಫಿ ಮಂಡಳಿ, ಕಂದಾಯ, ತೋಟಗಾರಿಕೆ ಇಲಾಖೆಗಳನ್ನು ಒಳಗೊಂಡಂತೆ ಜಂಟಿ ಸರ್ವೇ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿತ್ತು. ನಮ್ಮ ಸರ್ಕಾರವಿದ್ದಾಗ ಮೂರು ವರ್ಷ ನಿರಂತರ ಪರಿಹಾರ ನೀಡಿದ್ದೇವೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ವಕ್ತಾರ ಅರುಣ್‌ಕುಮಾರ್, ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಗೌಡ, ಕೃಷಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್‌ಚಂದ್ರ, ಮಂಡಲ ಅಧ್ಯಕ್ಷ ಮಚ್ಚಂಡ ಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಮತ್ತಿತರರಿದ್ದರು.